ಹುಬ್ಬಳ್ಳಿ, ಆ.14- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ. ಕರ್ನಾಟಕದ ಜನತೆ ಯಾವುದೇ ಕಾರಣಕ್ಕೂ ಅವರಿಗೆ ಮತ ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಉತ್ತರ ಪ್ರದೇಶದಲ್ಲಿ ಸೋಲುವ ಭೀತಿಯಿಂದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲಬಹುದೆಂದು ಭಾವಿಸಿದ್ದಾರೆ. ಬೀದರ್‍ನಿಂದ ಕಣಕ್ಕಿಳಿದರೂ ಅವರ ಸೋಲನ್ನು ಯಾರೊಬ್ಬರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಜ್ಯ ಪ್ರವಾಸದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮುಖಂಡರಾದ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಆರೋಪಗಳ ಸುರಿಮಳೆಗೈದರು.
ಕರ್ನಾಟಕದಿಂದ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲಲು ಬಿಜೆಪಿ ಅವಕಾಶ ಕೊಡುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಈ ಬಾರಿ ಲೋಕಸಭಾ ಚುಣಾವಣೆಯಲ್ಲಿ ರಾಜ್ಯದ ಜನತೆ ಸಾರಾಸಗಟಾಗಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆ ನಂತರ ಸಾಲು ಸಾಲು ಸೋಲು ಕಂಡಿರುವ ಕಾಂಗ್ರೆಸ್‍ಗೆ ಗೆಲುವು ಎಂದರೆ ಏನು ಎನ್ನುವುದೇ ಗೊತ್ತಿಲ್ಲ. ಜನರ ವಿಶ್ವಾಸ ಕಳೆದುಕೊಂಡಿರುವ ಒಂದು ರಾಷ್ಟ್ರೀಯ ಪಕ್ಷ ಇಂದು ಅಸ್ತಿತ್ವಕ್ಕಾಗಿ ಹೋರಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಯಡಿಯೂರಪ್ಪ ಲೇವಡಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಿಂದ ಸ್ಪರ್ಧೆ ಮಾಡುತ್ತಾರೆ ಎಂಬುದರಲ್ಲಿ ಹುರುಳಿಲ್ಲ. ಯಾರು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಬೇರುಗಳು ಸಾಕಷ್ಟು ಭದ್ರವಾಗಿವೆ ಎಂದರು.