ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇವಲ ಮೂರು ಜಿಲ್ಲೆಗಳಿಗೆ ಸಿಎಂ ಎನ್ನುವಂತಾಗಿದೆ.ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಬರಗಾಲ ತಾಂಡವವಾಡುತ್ತಿವೆ. ಕುಡಿಯುವ ನೀರು, ಬೆಳೆದ ಬೆಳೆಗಳು ಒಣಗಿ ಹೋಗುತ್ತಿವೆ. ಜಾನುವಾರುಗಳಿಗೂ ನೀರು ಇಲ್ಲದಂತಾಗಿದೆ. ನೂತನ ತಾಲೂಕುಗಳಿಗೆ ತಹಶೀಲ್ದಾರ್ ಅವರ ನೇಮಕ ಬಿಟ್ಟು ಮತ್ಯಾವುದೇ ಕೆಲಸ ಆಗಿಲ್ಲ ಎಂದು ಅವರು ಆರೋಪಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಲಿಂಗಾಯತ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸುತ್ತಾರೆ. ನೀವು, ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೀರಿ ಎಂದು ಬಹಿರಂಗ ಪಡಿಸಿ ಎಂದು ಸವಾಲು ಹಾಕಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ಉತ್ತರ ಕರ್ನಾಟಕ ಹಿಂದುಳಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರಣ. ಅತಿ ಹೆಚ್ಚು ಆಳ್ವಿಕೆ ನಡೆಸಿದ ಕಾಂಗ್ರೆಸ್ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಮತ್ತೊಂದೆಡೆ ಬೆಳಗಾವಿಯಲ್ಲಿರುವ ಕೆ.ಶಿಪ್ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.ಇದು ಏನನ್ನು ಸೂಚಿಸುತ್ತದೆ ಎಂದು ಅವರು ಪ್ರಶ್ನಿಸಿದರು.
ಸಂಸದ ಪ್ರಹ್ಲಾದ್ ಜೋಷಿ ಮಾತನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ಯುದ್ಧವಿಮಾನ ಒಪ್ಪಂದದ ಬಗ್ಗೆ ಆಧಾರರಹಿತವಾಗಿ ಆರೋಪ ಮಾಡುತ್ತಿದ್ದಾರೆ. ಫ್ರಾನ್ಸ್ ಅಧ್ಯಕ್ಷರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಅವಿಶ್ವಾಸ ನಿರ್ಣಯದ ಹುಚ್ಚಾಟದ ನಂತರವೂ ಅವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗಲೂ ಅವರು ಅತ್ಯಂತ ಬಾಲಿಷತನದ ಹಾಗೂ ಬೇಜವಾಬ್ದಾರಿತನದ ಹೇಳಿಕೆ ನಿಲ್ಲಿಸಬೇಕು. ನಿಮ್ಮ ಸುಳ್ಳು ಹೇಳಿಕೆಗಳನ್ನು ಜನರು ನಂಬುವಷ್ಟು ಮೂರ್ಖರಲ್ಲ ಎಂದು ಜೋಷಿ ತಿರುಗೇಟು ನೀಡಿದರು.