ಬೆಂಗಳೂರು, ಆ.14- ತಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು.
ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಬೇಕೆಂದು ಕನಸಿನಲ್ಲೂ ಭಾವಿಸಿಲ್ಲ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ರಾಷ್ಟ್ರ ರಾಜಕಾರಣಕ್ಕೆ ಮುಖ್ಯಮಂತ್ರಿ ಹೋಗುವುದಿಲ್ಲ. ರಾಜ್ಯದಲ್ಲೇ ಇದ್ದು ಜನಸೇವೆ ಮಾಡುತ್ತಾರೆ ಎಂದರು.
ದಾಖಲೆ ಒದಗಿಸಲಿ:
ಸರ್ಕಾರಿ ನೌಕರ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆದಿದೆ ಎಂಬ ಆರೋಪಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ದಾಖಲೆ ಇದ್ದರೆ ಒದಗಿಸಬೇಕು. ಇಲ್ಲದಿದ್ದರೆ ಬಾಯಿ ಮುಚ್ಚಿಕೊಂಡು ಇರಬೇಕೆಂದು ಗರಂ ಆದರು.
ಶಿಫಾರಸು ಪತ್ರ ನೀಡಿ ತಮ್ಮ ಇಲಾಖೆಯಲ್ಲಿ ಸಾಕಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅದಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಮಾಜಿ ಉಪಮುಖ್ಯಮಂತ್ರಿಯಾಗಿ ಗೌರವದಿಂದ ಇರಬೇಕು. ನಾನು ಹಿಂದೆಯೂ ವರ್ಗಾವಣೆ ವಿಚಾರದಲ್ಲಿ ಹಣ ಪಡೆದಿಲ್ಲ. ಈಗಲೂ ಪಡೆದಿಲ್ಲ, ಮುಂದೆಯೂ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜ್ವಲ್ ರೇವಣ್ಣ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವುದು ಮುಖ್ಯಮಂತ್ರಿ ಕುಮಾರಸ್ವಾಮಿ,ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ರಾಜ್ಯಾಧ್ಯಕ್ಷರಾದ ಎಚ್.ವಿಶ್ವನಾಥ್ ಅವರು ತೀರ್ಮಾನ ಮಾಡುತ್ತಾರೆ ಎಂದರು.
ಚುನಾವಣಾ ಪೂರ್ವ ಹೊಂದಾಣಿಕೆ ಬಗ್ಗೆ ಉಭಯ ಪಕ್ಷಗಳ ನಾಯಕರು ಚರ್ಚೆ ಮಾಡುತ್ತಾರೆ ಎಂದರು.
ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಉಪಮುಖ್ಯಮಂತ್ರಿಯಾಗಿರುವ ಪರಮೇಶ್ವರ್ ಅವರು ಗೃಹ ಖಾತೆ ಹೊಂದಿದ್ದಾರೆ. ಎಲ್ಲೆಲ್ಲಿ ದಬ್ಬಾಳಿಕೆ ನಡೆಯುತ್ತಿದೆ ಎಂಬ ವರದಿ ತರಿಸಿಕೊಳ್ಳಲಿ ಬೇಡ ಎನ್ನುವುದಿಲ್ಲ ಎಂದರು.
ಅತಿಯಾದ ಮಳೆಯಿಂದ ಹಾನಿಗೀಡಾಗಿರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ರೇವಣ್ಣ ಹೇಳಿದರು.
ಇದೇ ಸಂದರ್ಭದಲ್ಲಿ ಬೂತ್‍ಕಮಿಟಿ ಅಧ್ಯಕ್ಷ ಸಿ.ಬಿ.ಸುರೇಶ್‍ಬಾಬು, ಬೆಂಗಳೂರು ನಗರ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರ ಮುಖಂಡರು ಹಾಜರಿದ್ದರು.