ಕೊಡಗು ಜಿಲ್ಲೆಯಲ್ಲಿ ರಕ್ಷಣಾತ್ಮಕ ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ

 

ಬೆಂಗಳೂರು, ಆ.16-ಕೊಡಗು ಜಿಲ್ಲೆ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾತ್ಮಕ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಪ್ರವಾಹಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಕಾರ್ಯದರ್ಶಿಗಳು ಕೂಡಲೇ ಆಯಾ ಜಿಲ್ಲೆಗಳಿಗೆ ತೆರಳಿ ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಹಟ್ಟಿಹೊಳೆ ಬಳಿಯ ಗ್ರಾಮದ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿನ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಜನರ ರಕ್ಷಣೆಗೆ ನೆರವು ನೀಡುವ ಬಗ್ಗೆ ವಾಯುಪಡೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಕೊಡಗಿನಲ್ಲಿ ಲೋಕೋಪಯೋಗಿ ಸಚಿವರಲ್ಲದೆ, ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಮಾತನಾಡಿದ್ದು, ವಸ್ತುಸ್ಥಿತಿಯ ಮಾಹಿತಿಯನ್ನು ಪಡೆಯಲಾಗಿದೆ. ಸಾರ್ವಜನಿಕರಿಗೆ ನೆರವು ನೀಡಲು ಅನಿವಾರ್ಯವಾದರೆ ಗಂಜಿ ಕೇಂದ್ರ ತೆರೆದು ಇತರೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿರುವುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ