ಪಂಚಭೂತಗಳಲ್ಲಿ ಲೀನರಾದ ಅಜಾತಶತ್ರು…

ನವದೆಹಲಿ:ಆ-17: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ(93) ಅವರ ಅಂತ್ಯ ಸಂಸ್ಕಾರ ಯಮುನಾನದಿ ತೀರದ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ವಾಜಪೇಯಿ ಅವರ ಅಂತ್ಯ ಸಂಸ್ಕಾರವನ್ನು ಬ್ರಾಹ್ಮಣ ಸಂಪ್ರದಾಯದ ವಿಧಿ-ವಿಧಾನಗಳಂತೆ ನೆರವೇರಿಸಲಾಯಿತು. ಕ್ರಿಯಾ ವಿಧಾನದಲ್ಲಿ ಶಾಂತಿ ಮಂತ್ರಘೋಷಗಳು ನಡೆದವು. ಕುಟುಂಬಸ್ಥರು ಪಾರ್ಥೀವ ಶರೀರವನ್ನು ಪ್ರದಕ್ಷಿಣೆಹಾಕಿ ಅಂತಿಮ ನಮನ ಸಲ್ಲಿಸಿದರು. ಬಳಿಕ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಮುಂದಾಳತ್ವದಲ್ಲಿ ಅವರ ಪತಿ, ಅಳಿಯ ರಂಜನ್​ ಭಟ್ಟಾಚಾರ್ಯ ಅವರು ಮಾಜಿ ಪ್ರಧಾನಿ ಚಿತೆಗೆ ಅಗ್ನಿಸ್ಪರ್ಶಮಾಡಿದರು. ಅಜಾತಶತ್ರು ಎಂದೇ ಹೆಸರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನವಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಕಳೆದ ಎರಡು ತಿಂಗಳಿನಿಂದಲೂ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ 5.10 ವೇಳೆಗೆ ಅವರು ಕೊನೆಯುಸಿರೆಳೆದಿದ್ದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸೇರಿ ಹಲವು ಗಣ್ಯರು ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಝಾಯಿ ಮತ್ತು ಶ್ರೀಲಂಕಾ ವಿದೇಶಾಂಗ ಸಚಿವ ಲಕ್ಷ್ಮಣ್ ಕಿರಿಯೆಲಾ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌, ನೌಕಾದಳದ ಮುಖ್ಯಸ್ಥ ಸುನೀಲ್‌ ಲಂಬಾ ಮತ್ತು ವಾಯುಪಡೆ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಬಿರೇಂದರ್‌ ಸಿಂಗ್‌ ಧಾವೋ ಅವರು ಅಂತಿಮ ಗೌರವ ಸಲ್ಲಿಸಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಮೊಮ್ಮಗಳು ನಿಹಾರಿಕಾಗೆ ಹಸ್ತಾಂತರಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ