ಕೊಡಗು ಜಿಲ್ಲೆಗೆ ಸಿಎಂ ಭೇಟಿ-ಪರಿಹಾರ ಕಾರ್ಯಗಳ ಪರಿಶೀಲನೆ

 

ಬೆಂಗಳೂರು, ಆ.18- ಭಾರೀ ಮಳೆಯಿಂದ ಪ್ರವಾಹ, ಭೂ ಕುಸಿತಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಗೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು.
ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಹೆಲಿಕಾಫ್ಟರ್ ಮೂಲಕ ಕೊಡಗು ಜಿಲ್ಲೆಗೆ ಭೇಟಿ ನೀಡಿದರು.
ಜಿಲ್ಲಾಡಳಿತ ಕೈಗೊಂಡಿರುವ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು,ಅಗತ್ಯವಿರುವ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಉಂಟಾಗಿರುವ ಭೂ ಕುಸಿತ, ರಸ್ತೆ, ಸೇತುವೆ, ವಿದ್ಯುತ್ ಸಂಪರ್ಕ ಹಾನಿ, ಆಸ್ತಿ-ಪಾಸ್ತಿ ನಷ್ಟ, ಜೀವ ಹಾನಿಗಳ ಬಗ್ಗೆ ಮಾಹಿತಿಯನ್ನು ಪಡೆದರು. ಸಂಕಷ್ಟದಲ್ಲಿರುವ ಜನರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದರು.

ಅತಿಯಾದ ನೀರಿನಲ್ಲಿ ಸಿಲುಕಿದ್ದ ಜನರ ರಕ್ಷಣೆಗೆ ಸೇನೆ ನೆರವನ್ನು ಪಡೆಯಲಾಗಿದ್ದು, ನೂರಾರು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಅಲ್ಲದೆ, ಆಹಾರ, ಬಟ್ಟೆ, ಔಷಧ, ನೀರು ಸೇರಿದಂತೆ ಅತ್ಯವಶ್ಯಕ ವಸ್ತುಗಳ ಪೂರೈಕೆಗೂ ಕ್ರಮ ಕೈಗೊಂಡಿರುವ ಮಾಹಿತಿಯನ್ನು ಪಡೆದರು.
ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ನಿನ್ನೆಯಿಂದ ಮಡಿಕೇರಿಯಲ್ಲಿ ಬೀಡುಬಿಟ್ಟಿದ್ದು, ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ಮಾಹಿತಿ ಪಡೆದು ತುರ್ತು ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಜತೆಗೆ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಆದ್ಯತೆ ನೀಡಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದು, ಪರಿಸ್ಥಿತಿಯನ್ನು ಖುದ್ದು ನಿರ್ವಹಿಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕೊಡಗು ಪ್ರವಾಸ ಕೈಗೊಳ್ಳುವ ಮುನ್ನ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹದಿಂದ ಆಗಿರುವ ಅನಾಹುತಗಳ ಬಗ್ಗೆ ಮಾಹಿತಿ ಪಡೆದರು.
ಈ ಜಿಲ್ಲೆಗಳಲ್ಲಿ ಈಗಾಗಲೇ ಕೈಗೊಂಡಿರುವ ಪರಿಹಾರ ಕಾರ್ಯಗಳ ಬಗ್ಗೆಯೂ ಪರಿಶೀಲನೆ ನಡೆಸಿ ತುರ್ತಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳು ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ನೈಸರ್ಗಿಕ ವಿಕೋಪ, ಕಂದಾಯ, ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ