ಬ್ಯಾಂಕಿಂಗ್ ಪರೀಕ್ಷೆ: ರಾಜ್ಯದ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೇಂದ್ರಕ್ಕೆ ರಾಜ್ಯ ಪತ್ರ

 

ಬೆಂಗಳೂರು,ಆ.18- ಅಖಿಲ ಭಾರತ ಮಟ್ಟದ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ.
ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೇಂದ್ರ ಹಣಕಾಸು ಸಚಿವರಾದ ಪಿಯೂಷ್ ಗೋಯಲ್‍ಗೆ ಪತ್ರ ಬರೆದು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ಕನ್ನಡದಲ್ಲೇ ಪರೀಕ್ಷೆ ಬರೆಯಲು ಸ್ಥಳೀಯರಿಗೆ ಅವಕಾಶ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು. ಈಗ ಪರಮೇಶ್ವರ್ ಕೂಡ ಕನ್ನಡ ಆಸ್ಮಿತೆಯನ್ನೇ ಬಳಸಲು ಮುಂದಾಗಿದ್ದಾರೆ.
ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲೀಷ್‍ನಲ್ಲಿ ಪರೀಕ್ಷೆ ಬರೆಯಬೇಕೆಂದು ಸೂಚಿಸುವುದು ಸರಿಯಾದ ಕ್ರಮವಲ್ಲ. ಉತ್ತರ ಭಾರತದ ವಿದ್ಯಾರ್ಥಿಗಳು ಹಿಂದಿಯಲ್ಲಿ ಸಾಕಷ್ಟು ಪಳಗಿರುತ್ತಾರೆ. ಆದ್ದರಿಂದ ಮಾತೃಭಾಷೆಯಲ್ಲೇ ಪರೀಕ್ಷೆ ಬರೆದರೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಮನವಿ ಮಾಡಿದ್ದಾರೆ.

ಈ ಹಿಂದೆ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸಲು ಅವಕಾಶ ನೀಡುವಂತೆ ಪ್ರಧಾನಮಂತ್ರಿ, ಹಣಕಾಸು ಸಚಿವರು ಇಲಾಖಾ ಅಧಿಕಾರಿಗಳನ್ನು ಭೇಟಿ ಮಾಡಲಾಗಿತ್ತು. ಈವರೆಗೂ ಯಾವುದೇ ಕ್ರಮವನ್ನು ಕೈಗೊಳ್ಳದ ಕಾರಣ ಮತ್ತೊಮ್ಮೆ ಉಪಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಸ್ಥಳೀಯ ಭಾಷೆಗಳಿಗೆ ಮೊದಲ ಆದ್ಯತೆ ನೀಡಬೇಕೆಂಬ ನಿಯಮವಿದೆ. ಇದು ಕೇವಲ ರಾಜಕೀಯ ಲಾಭ-ನಷ್ಟದ ವಿಷಯವಲ್ಲ. ಕರ್ನಾಟಕ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತು ಕ್ರಮವನ್ನು ತೆಗೆದುಕೊಳ್ಳಲೇಬೇಕು. ಮುಂದೆ ನಡೆಯುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ.
ಕೇಂದ್ರ ಸರ್ಕಾರ ಇದನ್ನು ಎಷ್ಟರಮಟ್ಟಿಗೆ ಗಂಭೀರವಾಗಿ ಪರಿಗಣಿಸುತ್ತದೆ ಎಂಬುದನ್ನು ಕಾದು ನೋಡಬೇಕು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ