
ಮಡಿಕೇರಿ:ಆ-19: ಧಾರಕಾರ ಮಳೆ, ಭೀಕರ ಪ್ರವಾಹಕ್ಕೆ ಮುಳುಗಿರುವ ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎರಡನೇ ದಿನವಾದ ಇಂದು ಸಹ ವೈಮಾನಿಕ ಸಮೀಕ್ಷೆ ನಡೆಸಿದರು.
ಮೈಸೂರು ವಿಮಾನ ನಿಲ್ದಾಣದಿಂದ ಹೊರಟು ಸೋಮವಾರಪೇಟೆ, ಶುಂಠಿ ಕೊಪ್ಪ, ಮಾದಾಪುರ, ಮುಕ್ಕೋಡ್ಲು, ಹಾರಂಗಿ ಹಿನ್ನೀರು ಪ್ರದೇಶ,ಸಿದ್ದಾಪುರ, ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳ ಸಮೀಕ್ಷೆ ನಡೆಸಿದರು.
ಅವರ್ತಿ ಗ್ರಾಮದಲ್ಲಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸೇನಾ ಸಿಬ್ಬಂದಿ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೇ ತಿಂಗಳ 14 ರಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ ಎಂದು ತಿಳಿಸಿದರು.
ಪ್ರವಾಹದ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 15 ರಂದೇ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೈ ಆಲರ್ಟ್ ಘೋಷಿಸಲಾಗಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಯೋಧರು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮಕ್ಕಂದೂರಿನಲ್ಲಿ ಸಂಕಷ್ಟದಲ್ಲಿ ಸಿಲುಕಿದ ಜನರನ್ನು ರಕ್ಷಿಸಲಾಗಿದೆ. 31 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ಆಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.
CM HD Kumaraswamy, conducts,aerial survey flood-hit Kodagu