ಬೆಂಗಳೂರು: ಪ್ರವಾಹ ಪೀಡಿತ ಸಂತ್ರಸ್ತರ ನೆರವಿಗಾಗಿ ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಒಂದು ತಿಂಗಳ ವೇತನವನ್ನು ನೀಡಲು ನಿರ್ಧರಿಸಿದ್ದಾರೆ.
ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ಕಾಂಗ್ರೆಸ್ ಸಂಸದರು, ಶಾಸಕರು ಒಂದು ತಿಂಗಳ ವೇತನ ನೀಡಲು ನಿರ್ಧರಿಸಲಾಗಿದೆ ಎಂದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ನೀಡಲು ಒಂದು ತಿಂಗಳ ವೇತನ ನೀಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ ಅವರ ನೇತೃತ್ವದಲ್ಲಿ ತುರ್ತು ಪರಿಹಾರ ಸಮಿತಿಯನ್ನು ರಾಹುಲ್ ಗಾಂಧಿ ಅವರು ರಚನೆ ಮಾಡಿದ್ದಾರೆ. ಈ ಸಮಿತಿಯು ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಹೇಳಿದರು.
ಕೊಡಗು ಮತ್ತು ಕೇರಳದ ಪ್ರವಾಹ ಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿ ಅವರಿಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಇನ್ನು ರಫೇಲ್ ಡೀಲ್ ಭ್ರಷ್ಟಾಚಾರದ ಬಗ್ಗೆ ಎಲ್ಲಾ ರಾಜ್ಯಗಳಲ್ಲಿ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿರುವುದಾಗಿಯೂ ತಿಳಿಸಿದರು.
KPCCPresident dinesh gundurao,Kerala and Karnataka floods MLA’s, MLC’s and MP’s donating one month’s salary