ಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

 

ಬೆಂಗಳೂರು, ಆ.20- ಸರ್ಕಾರದ ವಿವಿಧ ಇಲಾಖೆಗಳ ಗುತ್ತಿಗೆ ನೌಕರರಿಗೆ ವೇತನ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುತ್ತಿಗೆ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಕರ್ನಾಟಕ ಸರ್ಕಾರಿ ಗುತ್ತಿಗೆ ನೌಕರರ ಮಹಾ ಒಕ್ಕೂಟ ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ನೂರಾರು ಗುತ್ತಿಗೆ ನೌಕರರು ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸಂಘಟನೆಯ ಮುಖಂಡ ಡಾ.ಎಚ್.ವಿ.ವಾಸು ಮಾತನಾಡಿ, ಹಲವು ವರ್ಷಗಳಿಂದ ಪಶುಸಂಗೋಪನಾ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಡಿ ಗ್ರೂಪ್ ನೌಕರರು, ಡಾಟಾ ಎಂಟ್ರಿ ಆಪರೇಟರ್, ಮತ್ತು ವಾಹನ ಚಾಲಕರನ್ನು ಇಲಾಖೆಯ ಹಿರಿಯ ಅಧಿಕಾರಿಗಳು ತಾಂತ್ರಿಕ ಸಮಸ್ಯೆ ನೀಡಿ ಕೆಲಸದಿಂದ ವಜಾ ಮಾಡುತ್ತಿದ್ದಾರೆ. ಇದರಿಂದ ಸಾವಿರಾರು ನೌಕರರು ಸಂಕಷ್ಟದಲ್ಲಿದ್ದು, ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ ಎಂದು ಹೇಳಿದರು.
ಹಲವು ವರ್ಷಗಳಿಂದ ಕೆಲಸ ಮಾಡಿದ ಪಶು ಸಂಗೋಪನೆ ಇಲಾಖೆಯ ಗುತ್ತಿಗೆ ನೌಕರರನ್ನು ಯಾವುದೇ ಕಾರಣ ನೀಡದೆ ಕೆಲಸದಿಂದ ವಜಾ ಮಾಡಲಾಗುತ್ತಿದೆ. ಕಳೆದ ಐದಾರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ನೌಕರರ ಬದುಕು ದುಸ್ತರವಾಗಿದೆ ಎಂದು ಅವರು ಹೇಳಿದರು.
ಸರ್ಕಾರದ 15 ವಿವಿಧ ಇಲಾಖೆಗಳ 30 ಸಾವಿರಕ್ಕೂ ಅಧಿಕ ಗುತ್ತಿಗೆ ನೌಕರರು ವೇತನ ಇಲ್ಲದೆ, ಸಂಕಷ್ಟ ದಲ್ಲಿದ್ದಾರೆ. ಇದು ಕಾನೂನಿನ ಉಲ್ಲಂಘನೆ ಮಾತ್ರವಲ್ಲದೆ, ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಎಲ್ಲಾ ಗುತ್ತಿಗೆ ನೌಕರರಿಗೆ ಸರಿಯಾಗಿ ವೇತನ ಬಿಡುಗಡೆ ಮಾಡಬೇಕು. ಮಾತ್ರವಲ್ಲ ಅವರ ಕೆಲಸವನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ