ಬೆಂಗಳೂರು, ಆ.21- ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತಂತೆ ವಿಜ್ಞಾನಿ ಡಾ.ಕಸ್ತೂರಿ ರಂಗನ್ ಸಮಿತಿ ನೀಡಿದ್ದ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎನ್ನುವ ಮೂಲಕ ರಾಜ್ಯ ಸರ್ಕಾರ ಅಧಿಕೃತವಾಗಿ ತಿರಸ್ಕರಿಸಿದೆ.
ಸರ್ಕಾರದ ಈ ನಿಲುವಿನಿಂದಾಗಿ ಕಳೆದ 5 ವರ್ಷಗಳಿಂದ ನಡೆಯುತ್ತಿದ್ದ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಸಮರಕ್ಕೆ ಕೊನೆಗೂ ತೆರೆಬಿದ್ದಿದೆ.
ಇದೇ ಆಗಸ್ಟ್ 17ರಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದು, ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನ ಮಾಡಲು ಸಾಧ್ಯವೇ ಇಲ್ಲ. ಪಶ್ಚಿಮ ಘಟ್ಟ ಸಂರಕ್ಷಣೆ ಬಗ್ಗೆ ರಾಜ್ಯ ಸರ್ಕಾರ ತನ್ನದೇ ಆದ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಅರಣ್ಯ ಮತ್ತು ಹವಾಮಾನ ಸಚಿವಾಲಯದ ಕಾರ್ಯದರ್ಶಿ ಸಿ.ಕೆ.ಮಿಶ್ರಾ ಅವರಿಗೆ ಪತ್ರ ಬರೆದಿರುವ ಸಂದೀಪ್ ದವೆ, ವರದಿಯನ್ನು ಕರ್ನಾಟಕ ಸರ್ಕಾರ ಏಕೆ ತಿರಸ್ಕರಿಸುತ್ತದೆ ಎಂಬುದಕ್ಕೆ ಕೆಲವು ಕಾರಣಗಳನ್ನು ನೀಡಿದ್ದಾರೆ. ಕರ್ನಾಟಕ ಸರ್ಕಾರ ಪಶ್ಚಿಮ ಘಟ್ಟದಲ್ಲಿರುವ ಜೀವವೈವಿಧ್ಯ, ಅರಣ್ಯ ಸಂರಕ್ಷಣೆ ಹಾಗೂ ಪರಿಸರ ನಾಶವಾಗದಂತೆ ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ವರದಿ ಅನುಷ್ಠಾನ ಮಾಡದಿದ್ದರೆ ಯಾವುದೇ ರೀತಿಯ ದುಷ್ಪರಿಣಾಮ ಬೀರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವರದಿ ಅನುಷ್ಠಾನ ಸಂಬಂಧ ಸಾರ್ವಜನಿಕರು, ಸಂಘ ಸಂಸ್ಥೆಗಳು, ಪರಿಸರ ತಜ್ಞರು ಪ್ರಾಣಿ-ಪಕ್ಷಿಗಳ ತಜ್ಞರು ಸೇರಿದಂತೆ ಹಲವರ ಜೊತೆ ಮಾತುಕತೆ ನಡೆಸಲಾಗಿದೆ. ಪ್ರತಿಯೊಬ್ಬರು ವರದಿ ಅನುಷ್ಠಾನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅಕ್ಟೋಬರ್ 25ರೊಳಗೆ ವರದಿ ಅನುಷ್ಠಾನಗೊಳಿಸುವ ಸಂಬಂಧ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕು, ಆಕ್ಷೇಪಣೆ ಸಲ್ಲಿಸಲು ಇದೇ 25 ಕೊನೆಯ ದಿನ ಎಂದು ಕೇಂದ್ರ ಪರಿಸರ ಮತ್ತು ಹವಾಮಾನ ಇಲಾಖೆ ಸ್ಪಷ್ಟಪಡಿಸಿತ್ತು.