ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಬೆಳಗ್ಗೆ ಅಂತ್ಯ

ಬೆಂಗಳೂರು, ಆ. 29- ಮುಂದಿನ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಬೆಳಗ್ಗೆ ತೆರೆಬಿದ್ದಿದ್ದು, ಮತದಾರರ ಮನಗೆಲ್ಲಲು ಅಭ್ಯರ್ಥಿಗಳು ಕೊನೆಹಂತದ ಕಸರತ್ತು ನಡೆಸುತ್ತಿದ್ದಾರೆ.
ರಾಜ್ಯದ ಒಟ್ಟು 108 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿತ್ತು. ಪ್ರವಾಹದ ಕಾರಣದಿಂದ ಕೊಡಗು ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲಾಗಿದೆ. ಇದೀಗ ಒಟ್ಟಾರೆ 9,154 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿವಮೊಗ್ಗ, ಮೈಸೂರು ತುಮಕೂರು ಮಹಾನಗರ ಪಾಲಿಕೆಗಳಲ್ಲಿ ಒಟ್ಟು 13.33 ಲಕ್ಷ ಮತದಾರರಿದ್ದಾರೆ. 105 ಸ್ಥಳೀಯ ಸಂಸ್ಥೆಗಳಲ್ಲಿ 36.03 ಲಕ್ಷ ಮತದಾರರು ಇದ್ದಾರೆ.

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ 8340 ಮಂದಿ ಮತ್ತು ಶಿವಮೊಗ್ಗ, ಮೈಸೂರು ತುಮಕೂರು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ 814 ಮಂದಿ ಅಂತಿಮ ಕಣದಲ್ಲಿ ಉಳಿದಿದ್ದಾರೆ. ಈಗಾಗಲೇ 29 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಆಯೋಗ ಪ್ರಕಟಿಸಿದೆ.
ಇಂದು ಬೆಳಗ್ಗೆ ಬಹಿರಂಗ ಪ್ರಚಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ಮತ್ತು ನಾಳೆ ಮತದಾರರ ಮನವೊಲಿಸಲು ನಾನಾ ರೀತಿಯ ಆಸೆ, ಆಮಿಷಗಳನ್ನು ಒಡ್ಡುವುದರಲ್ಲಿ ನಿರತರಾಗಿರುತ್ತಾರೆ.
ರಾಜ್ಯದ 208 ನಗರ ಸ್ಥಳೀಯ ಸಂಸ್ಥೆಗಳಿಗೆ 2013ರಲ್ಲಿ ಚುನಾವಣೆ ನಡೆದಿತ್ತು. ಅವುಗಳ ಅವಧಿ ಇದೇ ಸೆಪ್ಟೆಂಬರ್‍ನಿಂದ 2018ರ ಮಾರ್ಚ್ ಮಧ್ಯದ ಅವಧಿಯಲ್ಲಿ ಕೊನೆಗೊಳ್ಳಲಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

2013ರಲ್ಲಿ 4,976 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 1,960 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರೂ ಈ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ.
ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ. ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚಿತವಾಗಿ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಅಭ್ಯರ್ಥಿಗಳ ಪರವಾಗಿ ಯಾವುದೇ ವ್ಯಕ್ತಿಯ ಬಹಿರಂಗ ಚುನಾವಣೆ ಪ್ರಚಾರ ನಡೆಸುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಅದರಂತೆ ಇಂದು ಬೆಳಗ್ಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಇದೇ 31ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಡದಿದ್ದರೂ ಮೈತ್ರಿ ಸರ್ಕಾರಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಲಾಗಿತ್ತು. ಚುನಾವಣೆ ಘೋಷಣೆಯಾದ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗದಂತೆ ಸಂಘರ್ಷ ರಹಿತವಾಗಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂದು ಹೇಳಿದ್ದರು. ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಕೂಡ ರಾಜ್ಯಮಟ್ಟದಲ್ಲಿ ಮೈತ್ರಿ ಮಾಡಿಕೊಂಡಿಲ್ಲ. ಸ್ಥಳೀಯ ಮಟ್ಟದಲ್ಲಿ ನಾಯಕರು ಮೈತ್ರಿ ಮಾಡಿಕೊಳ್ಳಲು ಸ್ವತಂತ್ರರಿದ್ದಾರೆ ಎಂದು ಹೇಳಿದ್ದರು.
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು.ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಚಾರಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಸ್ಥಳೀಯ ನಾಯಕರಿಗೆ ಚುನಾವಣೆಯ ಹೊಣೆಗಾರಿಕೆ ನೀಡಿದ್ದರು. ಈ ಚುನಾವಣೆ ಮೂರೂ ಪಕ್ಷಗಳಿಗೆ ಸತ್ವಪರೀಕ್ಷೆಯಾಗಿದ್ದು, ಹೊರಹೊಮ್ಮುವ ಫಲಿತಾಂಶ ಆಯಾ ಪಕ್ಷಗಳ ಮುಂದಿನ ಬೆಳವಣಿಗೆಗೆ ನಾಂದಿಯಾಗಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ