ನಾಳೆ ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಹಾಕಲು ಇಮ್ರಾನ್ ಪಾಷ ಮನವಿ

ಬೆಂಗಳೂರು,ಆ.30-ನಾಳೆ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷ ಮನವಿ ಮಾಡಿಕೊಂಡಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ ರೋಡ್ ಶೋ ನಡೆಸಿ ಜೆಡಿಎಸ್ ಅಭ್ಯರ್ಥಿಗಳ ಪರ ಮತ ಯಾಚಿಸಿ ಅವರು ಮಾತನಾಡುತ್ತಿದ್ದರು.
ಚನ್ನರಾಯಪಟ್ಟಣದಲ್ಲಿ 23 ವಾರ್ಡ್‍ಗಳಿದ್ದು, ಎಲ್ಲಾ ವಾರ್ಡ್‍ಗಳಲ್ಲೂ ಜೆಡಿಎಸ್ ಅ ಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಗಳು ಮತ್ತಷ್ಟು ಜನಪರ ಯೋಜನೆಗಳನ್ನು ಹಮ್ಮಿಕೊಳ್ಳಲು ಸಹಕರಿಸಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಸಿಎಂ ಕುಮಾರಸ್ವಾಮಿ ಅವರು ನೀಡಿರುವ ಜನಪರ ಕೊಡುಗೆಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಭಾಗದ ಜನರು ಜೆಡಿಎಸ್‍ಗೆ ತಮ್ಮ ಮತ ಚಲಾಯಿಸಬೇಕು ಎಂದು ಮನವಿ ಮಾಡಿಕೊಂಡರು.
ಕಳೆದ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷದ ಕಥೆ ಮುಗಿಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ದೇವರು ಮತ್ತು ಜನರ ಆಶೀರ್ವಾದದಿಂದ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುತ್ತಿದ್ದಾರೆ.
ಹಾಸನ ಜಿಲ್ಲೆ ಜೆಡಿಎಸ್‍ಗೆ ಅದೃಷ್ಟದ ಜಿಲ್ಲೆಯಾಗಿದೆ. ಈ ಜಿಲ್ಲೆಯಿಂದಲೇ ಆರಿಸಿಬಂದಿದ್ದ ದೇವೇಗೌಡರು ಪ್ರಧಾನಿಯಾಗಿದ್ದರು. ಸದ್ಯದಲ್ಲೇ ಲೋಕಸಭೆಗೂ ಚುನಾವಣೆ ನಡೆಯಲಿದ್ದು, ಮತ್ತೊಮ್ಮೆ ಹಾಸನ ಜನತೆ ಗೌಡರನ್ನು ದೆಹಲಿಗೆ ಆರಿಸಿ ಕಳುಹಿಸಿದರೆ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾದರೂ ಆಶ್ಚರ್ಯಪಡುವಂತಿಲ್ಲ ಎಂದು ಪಾಷ ಅಭಿಪ್ರಾಯಪಟ್ಟಿದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ