ಹೈದರಾಬಾದ್, ಆ.31- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅವರು ವಿಜಯವಾಡದ ಖಾಸಗಿ ಹೋಟೆಲ್ನಲ್ಲಿಂದು ಮಹತ್ವದ ಮಾತುಕತೆ ನಡೆಸಿದರು.
ಹೋಟೆಲ್ನಲ್ಲಿ ಉಭಯ ನಾಯಕರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಪರಸ್ಪರ ಸಹಕಾರ ಮನೋಭಾವದಿಂದ ಚುನಾವಣೆಯನ್ನು ಎದುರಿಸುವುದು. ಪ್ರಚಲಿತ ರಾಜಕೀಯ ವಿಚಾರಗಳು ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು.
ದಕ್ಷಿಣ ಭಾರತದ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ವಿಶಾಲ ಮನೋಭಾವದಿಂದ ಮುನ್ನಡೆಯಬೇಕು. ಪ್ರಾದೇಶಿಕ ಪಕ್ಷಗಳು ಪರಸ್ಪರ ಬೆಂಬಲ, ಸಹಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಮಾತುಕತೆಯನ್ನು ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ನಾಯಕತ್ವ ರೂಪಿಸುವುದು, ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆ ಮಾಡುವ ಬಗ್ಗೆಯೂ ಗಂಭೀರ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಾದೇಶಿಕ ಪಕ್ಷಗಳು ಪರಸ್ಪರ ಸಮಾನ ಮನೋಭಾವದಿಂದ ಕೇಂದ್ರದಲ್ಲೂ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ನಡೆಸಬೇಕಾಗಿದೆ. ಹೀಗಾಗಿ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಒಗ್ಗೂಡಿ ಚರ್ಚೆ ನಡೆಸಬೇಕಿದೆ ಎಂಬ ಬಗ್ಗೆ ಉಭಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.