ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪ

ಹುಬ್ಬಳ್ಳಿ, ಸೆ.1-ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿರುವುದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಹೇಳಿದರು.
ಜಿಡಿಪಿ 8.2 ರಷ್ಟಿದೆ ಎಂದು ಕೇಂದ್ರ ಸರ್ಕಾರ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಅವರದ್ದೇ ಸರ್ವೆಯಲ್ಲಿ 7.2 ದಾಖಲಾಗಿದೆ. ಹಾಗಿದ್ದೂ ಜನರಿಗೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಖರ್ಗೆ ಹೇಳಿದರು.
ನಮ್ಮ ಅಧಿಕಾರಾವಧಿಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿದ್ದರೂ ಪೆಟ್ರೋಲ್, ಡೀಸಲ್ ಬೆಲೆ ಏರಿಕೆಯಾಗಿರಲಿಲ್ಲ. ಆದರೆ ಈಗ ಪೆಟ್ರೋಲ್ ಬೆಲೆ 80ರ ಗಡಿ ದಾಟಿದ್ದು, ಡೀಸಲ್ ಬೆಲೆ 70ಕ್ಕೇರಿದೆ. ತೈಲ ಬೆಲೆ ಏರಿಕೆಯಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತಪ್ಪು ಆರ್ಥಿಕ ನೀತಿಯಿಂದ ಕೇಂದ್ರ ಮನಬಂದಂತೆ ಹಣ ವ್ಯಯಿಸುತ್ತಿದೆ. ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ವಿಫಲವಾಗಿದೆ. ಎರಡು ಕೋಟಿ ನಿರುದ್ಯೋಗಿಗಳಿಗೆ ನೌಕರಿ ಕೊಡಿಸುವ ಭರವಸೆ ಹುಸಿಯಾಗಿದೆ.
ಆರ್ಥಿಕವಾಗಿ, ಸಾಮಾಜಿಕವಾಗಿ ಮೋದಿ ಸರ್ಕಾರ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದೆ ಎಂದು ಖರ್ಗೆ ಕಿಡಿಕಾರಿದರು.
ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕೇಂದ್ರ ಸರ್ಕಾರ ಮಾನ್ಯತೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ