ಬಿಜೆಪಿಗೆ ಮುಸ್ಲಿಮರು ಮತಹಾಕುವುದಿಲ್ಲ ಒಂದು ವೇಳೆ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ ಎಂದು ಹೇಳಿಕೆಗೆ ಸಚಿವ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯ

ತುಮಕೂರು, ಸೆ.1- ಬಿಜೆಪಿಗೆ ಮುಸ್ಲಿಮರು ಮತಹಾಕುವುದಿಲ್ಲ. ಒಂದು ವೇಳೆ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ ಎಂದು ಹೇಳಿಕೆ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಜಮೀರ್ ಅವರು ಜನಪ್ರತಿನಿಧಿ ಆಗುವ ಯೋಗ್ಯತೆ ಇಲ್ಲ. ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಬಾಯಿಗೆ ಬಂದಂತೆ ಮಾತಾನಾಡಿದ್ದ ಅವರು, ಇದೀಗ ಇಂತಹ ಹೇಳಿಕೆ ನೀಡಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿರುವುದು ಸರಿಯಲ್ಲ ಎಂದು ಹೇಳಿದರು.

ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರ ಬಾಯಿಯಲ್ಲಿ ಇಂತಹ ಹೇಳಿಕೆ ಬಂದಿರುವುದು ದುರದೃಷ್ಟಕರ. ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆ ಎಂಬ ವಿವೇಚನೆಯೂ ಅವರಿಗಿಲ್ಲ. ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಿಂದು, ಮುಸ್ಲಿಂ ಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದರೂ ಚುನಾವಣಾ ಆಯೋಗ ಕೈಗೊಳ್ಳದಿರುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯವಾಗಿ ಕುಮಾರಸ್ವಾಮಿ ಅವರು ತಕ್ಷಣವೇ ಜಮೀರ್ ಅಹ್ಮದ್ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರದಲ್ಲಿ ಒಂದು ಕಪ್ಪು ಚುಕ್ಕಿಯಾಗಿ ರಾಜ್ಯದ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಜಮೀರ್ ಅಹ್ಮದ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಹಾರ ಹಾಕಿ ಅತನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಮಾತ್ರವಲ್ಲ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಅಗ್ರಹಿಸಿದ್ದಾರೆ
ದೇವೇಗೌಡರ ಕುಟುಂಬದ ಮೇಲೆ ವಾಗ್ದಾಳಿ ನಡೆಸಿದ್ದ ಜಮೀರ್ ಅವರಿಗೆ ಪ್ರಜಾಪ್ರಭುತ್ವದ ಮೌಲ್ಯವೇ ಗೊತ್ತಿಲ್ಲ. ಆದರೂ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಈ ದೇಶದಲ್ಲಿ ಧರ್ಮ ಮತ್ತು ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಇಂತಹವವ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆ.ಪಿ. ಮಹೇಶ್, ಜಯಸಿಂಹ, ಎಂ. ಬಿ. ನಂದೀಶ್ ಸೇರಿದಂತೆ ಇತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ