ಬೆಂಗಳೂರು, ಸೆ.2- ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಡೆಸುತ್ತಿರುವ ಪೂರ್ವ ತಯಾರಿ ಸಭೆ ಇಂದು ಕೂಡ ಮುಂದುವರಿದಿದ್ದು, ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ, ಜಾತ್ಯತೀತ ಶಕ್ತಿಗಳೊಂದಿಗೆ ಮೈತ್ರಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಹೋಗುವುದರ ಮೂಲಕ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಹತ್ವದ ಮಾತುಕತೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಪಕ್ಷದ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂದು ಎಂಟು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳೊಂದಿಗೆ ಲೋಕಸಭೆ ಚುನವಣೆ ರಣತಂತ್ರದ ಬಗ್ಗೆ ಚರ್ಚೆ ನಡೆಸಲಾಯಿತು.
ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬ್ಲಾಕ್ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿ ಕ್ರೋಢೀಕೃತ ಮಾಹಿತಿಯನ್ನು ಹೈಕಮಾಂಡ್ಗೆ ಕಳುಹಿಸುವ ಬಗ್ಗೆ ನಿರ್ಧರಿಸಲಾಯಿತು.
ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ಗುಲ್ಬರ್ಗ, ಬೆಳಗಾವಿ, ಚಿಕ್ಕೋಡಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ಉತ್ತರ ಕನ್ನಡ, ದಾವಣಗೆರೆ, ತುಮಕೂರು,ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಮುಖಂಡರುಗಳೊಂದಿಗೆ ಇಂದು ಬೆಳಗ್ಗೆ 10 ಗಂಟೆಯಿಂದ ಸತತವಾಗಿ ನಾಯಕರು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆ ನಡೆಸಿದರು.
ತಳಮಟ್ಟದಿಂದ ಪಕ್ಷ ಸಂಘಟನೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಕಾರ್ಯತಂತ್ರ ರೂಪಿಸುವುದು, ಸಮ್ಮಿಶ್ರ ಸರ್ಕಾರದ ಜನಪರ ಕೆಲಸಗಳ ಲಾಭ ಪಡೆದುಕೊಂಡು ಜನಮನ್ನಣೆ ಗಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಲಾಭವಾಗುತ್ತದೆ. ಅದೇ ರೀತಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆಯೂ ಕೂಡ ಚರ್ಚೆ ನಡೆದಿದೆ.