ಮುಂದಿನ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಎಲ್ಲ ಜಿಲ್ಲೆಗಳ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬರಬೇಕು.- ಸಚಿವ ಎನ್.ಮಹೇಶ್ ಆಶಯ

ಬೆಂಗಳೂರು, ಸೆ.5- ಮುಂದಿನ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಎಲ್ಲ ಜಿಲ್ಲೆಗಳ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬರಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎನ್.ಮಹೇಶ್ ತಿಳಿಸಿದ್ದಾರೆ.
ಶಿಕ್ಷಕರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಒಂದೂವರೆ ಕೋಟಿ ವಿದ್ಯಾರ್ಥಿಗಳ ಹಣೆಬರಹವನ್ನು ಶಿಕ್ಷಕರು ರೂಪಿಸುತ್ತಾರೆ. ಅವರಲ್ಲಿ ಸಕಾರಾತ್ಮಕ ಅಂಶಗಳನ್ನು ತುಂಬಿದರೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದು ಹೇಳಿದರು.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಕೋರಿಕೆ ವರ್ಗಾವಣೆ ಇರುವುದರಿಂದ ನಿಧಾನವಾಗುತ್ತಿದೆ. ಶೇ.10ರಷ್ಟು ಇದರಲ್ಲಿ ವ್ಯತ್ಯಾಸ ಉಂಟಾಗಬಹುದು. ಶಿಕ್ಷಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಖಾಸಗಿ ಶಾಲೆಗಳ ಶಿಕ್ಷಕರಿಗಿಂತ ಸರ್ಕಾರಿ ಶಾಲೆಗಳ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೇಶದ ಅಭಿವೃದ್ಧಿ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ವೃದ್ಧಿಗೊಳ್ಳುತ್ತದೆ ಎಂದು ಹೇಳಿದರು.
ಇದೇ ವೇಳೆ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ 75 ಮಂದಿ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಎಂಎಲ್‍ಸಿ ಪುಟ್ಟಣ್ಣ, ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಜಾಫರ್ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ