ಬೆಂಗಳೂರು, ಸೆ.6: ಬೆಂಗಳೂರಿನಲ್ಲಿರುವ ಕೆಲ ಸರಕಾರಿ ಕಚೇರಿಗಳನ್ನು ಉತ್ತರ ಕರ್ನಾಟಕ ಭಗಕ್ಕೆ ಸ್ಥಳಾಂತರ ಮಾಡುವ ಸಂಬಂಧ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿ ನೀಡಿರುವ ಪ್ರಸ್ತಾವನೆಯನ್ನು ಸಚಿವ ಸಂಪುಟ ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಈ ವಿಷಯವನ್ನು ತಿಳಿಸಿದರು.
ಪ್ರಸ್ತಾವನೆ: ಕೃಷ್ಣಭಗ್ಯ ಜಲ ನಿಗಮದ ಕೇಂದ್ರ ಹಾಗೂ ನೋಂದಾಯಿತ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರ ಮಾಡುವುದು. ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಹಾಗೂ ನೋಂದಾಯಿತ ಕಚೇರಿ, ಸಕ್ಕರೆ ನಿರ್ದೇಶನಾಲಯ, ಕಬ್ಬು ಅಭಿವೃದ್ಧಿ ಆಯುಕ್ತರು, ಕರ್ನಾಟಕ ವಿದ್ಯುತ್ ಮಗ್ಗ ನಿಗಮ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾದರಿಯಲ್ಲೆ ಉತ್ತರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯನ್ನು ನೂತನವಾಗಿ ಸ್ಥಾಪಿಸುವುದು. ರಾಜ್ಯ ಮಾನವ ಹಕ್ಕುಗಳ ಆಯೋಗದ ನಾಲ್ಕು ಸದಸ್ಯರ ಪೈಕಿ ಒಬ್ಬ ಸದಸ್ಯರ ಕಚೇರಿಯನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸುವುದು, ಎರಡು ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳನ್ನು ವರ್ಗಾಯಿಸುವುದು, ಪ್ರಾಚ್ಯವಸ್ತು ಮತ್ತು ವಸ್ತು ಸಂಗ್ರಹಾಲಯವನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಪ್ರಸ್ತಾವನೆ ಬಂದಿದೆ.
ಯಾವ ಯಾವ ಕಚೇರಿಯನ್ನು ಉತ್ತರ ಕರ್ನಾಟಕ ಭಗದ ಯಾವ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡುವ ಸಂಬಂಧ ಚರ್ಚಿಸಿ ವರದಿ ಸಿದ್ಧಪಡಿಸಿ, ಸಚಿವ ಸಂಪುಟದ ಮುಂದೆ ಮಂಡಿಸಲು ಸಂಪುಟ ಉಪ ಸಮಿತಿ ರಚಿಸಲು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಯಾರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಬೇಕು ಎಂಬ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿದೆ ಎಂದು ಕೃಷ್ಣಭೈರೇಗೌಡ ಹೇಳಿದರು.