ಬೆಂಗಳೂರು,ಸೆ.8-ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಸೆ.10ರಂದು ನೀಡಿರುವ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಅಂದು ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೆಎಸ್‍ಆರ್‍ಟಿಸಿ ಎಲ್ಲಾ ವಿಭಾಗ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಸೋಮವಾರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಬಂದ್ ದಿನದಂದು ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಸಿಬ್ಬಂದಿಗೆ ನೀಡಬಾರದು ಎಂದು ನಿರ್ದೇಶಿಸಲಾಗಿದೆ.
ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಿದ್ದು, ಇದು ವಾರದ ರಜೆ, ದೀರ್ಘಕಾಲದ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತ ಬಂದ್‍ಗೆ ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಬೆಂಬಲ ನೀಡುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಈ ಸೂಚನೆ ನೀಡಿದೆ.