ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಎತ್ತಿನಗಾಡಿಗಳ ಮೂಲಕ ಕಾಂಗ್ರೆಸ್ ಮೆರವಣಿಗೆ

 

ಬೆಂಗಳೂರು, ಸೆ.10- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕರೆ ನೀಡಿದ್ದ ಭಾರತ್ ಬಂದ್ ಅಂಗವಾಗಿ ಇಂದು ಮೈಸೂರು ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದವರೆಗೂ ಎತ್ತಿನಗಾಡಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಸಚಿವ ಜಮೀರ್ ಅಹಮ್ಮದ್ ಖಾನ್, ಶಾಸಕರಾದ ಎನ್.ಎ.ಹ್ಯಾರಿಸ್, ಎಚ್.ಎಂ.ರೇವಣ್ಣ ಮತ್ತಿತರರು ಎತ್ತಿನಗಾಡಿಯಲ್ಲಿ ಮೆರವಣಿಗೆ ನಡೆಸಿದರು.
ಸುಮಾರು ಏಳೆಂಟು ಎತ್ತಿನಗಾಡಿಗಳು, ಐದಾರು ಕುದುರೆ ಗಾಡಿಗಳು ಮೆರವಣಿಗೆಯಲ್ಲಿದ್ದವು. ಸಾವಿರಾರು ಮಂದಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಮೆರಣಿಗೆಯಲ್ಲಿ ಭಾಗವಹಿಸಿದ್ದರು.
ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರ ಕೈಗೆಟುಕದಂತೆ ದುಬಾರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರಿಂದ ಕೆಜಿ ರಸ್ತೆ, ಪ್ಯಾಲೆಸ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಸುಮಾರು ಒಂದೂವರೆ ಕಿ.ಮೀ. ರಸ್ತೆಯುದ್ದಕ್ಕೂ ಮೆರವಣಿಗೆಯಲ್ಲಿ ಜನ ಜಂಗುಳಿ ತುಂಬಿತ್ತು.
ಬೆಂಗಳೂರಿನ ನಾನಾ ಭಾಗಗಳಿಂದ ಮೆರವಣಿಗೆ ಬೈಕ್ ರ್ಯಾಲಿ, ಎತ್ತಿನ ಗಾಡಿ ಹಾಗೂ ವಿವಿಧ ಸ್ವರೂಪದಲ್ಲಿ ಆಗಮಿಸಿದ್ದ ಕಾರ್ಯಕರ್ತರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎತ್ತಿನ ಗಾಡಿ ಮೇಲೆ ಬೈಕನ್ನು ಇಟ್ಟು ಮೆರವಣಿಗೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ