ಬೀದಿ ರಂಪವಾದ ರಾಜಕಾರಣಕ್ಕೆ ಬಿಜೆಪಿ ಹೈಕಮಾಂಡ್ ಅತೃಪ್ತಿ

ಬೆಂಗಳೂರು, ಸೆ.12- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಕೇಂದ್ರ ಬಿಜೆಪಿ ವರಿಷ್ಠರು ಬಿ.ಎಸ್.ಯಡಿಯೂರಪ್ಪನವರಿಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 20 ಸ್ಥಾನಗಳನ್ನು ಗೆಲ್ಲಬೇಕು. ಇಲ್ಲವೇ ಇನ್ನು ಒಂದು ತಿಂಗಳ ಅವಧಿಯಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಬೇಕು ಎಂಬ ಎರಡು ಷರತ್ತುಗಳನ್ನು ಮುಂದಿಟ್ಟಿದೆ.
ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ನಾಯಕರು ಸರ್ಕಾರ ರಚನೆ ವಿಷಯದಲ್ಲಿ ಹಾದಿಬೀದಿ ರಂಪ ಮಾಡುವ ಬದಲು ಎರಡು ಆಯ್ಕೆಗಳಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಂಡು ಕಾರ್ಯಗತಗೊಳಿಸುವಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕಾಗಲಿ, ನಮಗಾಗಲಿ ಅಷ್ಟು ತೃಪ್ತಿ ತಂದಿಲ್ಲ. ಇದರಿಂದ ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷಕ್ಕೆ ಹಾನಿಯಾಗುತ್ತದೆ. ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಇದಕ್ಕೆ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೇ ಸೂಚಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ರಾಜ್ಯದ 28 ಕ್ಷೇತ್ರಗಳ ಪೈಕಿ ನೀವು ಎಲ್ಲಿಗೆ ಬಂದು ಪ್ರಚಾರ ಮಾಡು ಅಂದರೆ ಪ್ರಧಾನಿ ಭಾಷಣ ಮಾಡುತ್ತಾರೆ. ನಮಗೆ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳಲ್ಲಾದರೂ ಬಿಜೆಪಿ ಗೆಲ್ಲಬೇಕು. ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಿನ್ನಡೆಯಾಗಬಾರದು ಎಂದು ಸೂಚಿಸಿದ್ದಾರೆ.
ಸರ್ಕಾರ ರಚಿಸಲು ಸಾಧ್ಯವಾಗದಿದ್ದರೆ ನೀವು ಕೈ ಹಾಕಲೇಬಾರದು. ಶಾಸರಕನ್ನು ರೆಸಾರ್ಟ್‍ಗೆ ಕರೆದೊಯ್ಯುವುದು, ಇಲ್ಲವೇ ಬೇರೊಬ್ಬ ಶಾಸಕರನ್ನು ಪಕ್ಷಕ್ಕೆ ಕರೆತರುವುದು ನಮಗೆ ಸರಿ ಎನಿಸುತ್ತಿಲ್ಲ. ಇದಕ್ಕೆ ಇತ್ಯರ್ಥ ಹಾಡಲೇಬೇಕೆಂದು ಬಿಎಸ್‍ವೈಗೆ ಸೂಚಿಸಲಾಗಿದೆ.
ಹೈಕಮಾಂಡ್‍ನಿಂದ ಹಸಿರು ನಿಶಾನೆ ಸಿಕ್ಕ ಬಳಿಕವೇ ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಧುಮುಕಿದ್ದಾರೆ. ಇನ್ನು ಒಂದು ತಿಂಗಳ ಅವಧಿಯಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಿ ಬಿಜೆಪಿ ಅಧಿಕಾರ ಹಿಡಿಯಬೇಕು. ಈ ಪ್ರಯತ್ನದಲ್ಲಿ ಹಿನ್ನಡೆಯಾದರೆ ಲೋಕಸಭೆ ಚುನಾವಣೆವರೆಗೂ ಎಲ್ಲವನ್ನು ಕಾದುನೋಡುವ ತಂತ್ರಕ್ಕೆ ಶರಣಾಗಬೇಕೆಂಬ ತೀರ್ಮಾನಕ್ಕೂ ಬರಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ