ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು, ಸೆ.14-ಬೂದಿ ಮುಚ್ಚಿದ ಕೆಂಡದಂತಾಗಿರುವ ಬೆಳಗಾವಿಯ ಕಾಂಗ್ರೆಸ್‍ನ ಭಿನ್ನಮತ ಹಾಗೂ ಬಳ್ಳಾರಿಯಲ್ಲಿ ಉಂಟಾಗಿರುವ ಅಸಮಾಧಾನ ಹಿನ್ನೆಲೆಯಲ್ಲಿ ಹಲವು ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸರ್ಕಾರವನ್ನು ಅಸ್ಥಿರಗೊಳಿಸುತ್ತಾರೆ ಎಂಬ ಆತಂಕದ ಕಾರಣ ಡಿ.ಕೆ.ಶಿವಕುಮಾರ್ ನಿವಾಸದಲ್ಲಿಂದು ಮಹತ್ವದ ಸಭೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಡಿಕೆಶಿ ನಿವಾಸಕ್ಕೆ ತೆರಳಿ ಈ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ. ಅತೃಪ್ತ ಶಾಸಕರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.

ಯಾರನ್ನೂ ಕಡೆಗಣಿಸಬಾರದೆಂದು ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಬೆಳಗಾವಿಯಲ್ಲಿ ಭುಗಿಲೆದ್ದ ಅಸಮಾಧಾನ, ಬಳ್ಳಾರಿಯಲ್ಲಿ ಹಲವು ಶಾಸಕರು ಬಿಜೆಪಿಯತ್ತ ಮುಖ ಮಾಡಿರುವುದು, ಮೈತ್ರಿ ಸರ್ಕಾರದ ಬುಡ ಅಲುಗಾಡಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬ ವಿಷಯ ಸೇರಿದಂತೆ ಮುಂತಾದ ಊಹಾಪೆÇೀಹಗಳ ಬಗ್ಗೆ ಮುಖಂಡರು ಗಂಭೀರ ಚರ್ಚೆ ನಡೆಸಿದ್ದಾರೆ.
ಯಾವ್ಯಾವ ಶಾಸಕರು ಯಾವ ಪಕ್ಷದ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರನ್ನು ಹೇಗೆ ನಿಯಂತ್ರಿಸಬೇಕು. ಸರ್ಕಾರವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರು ವಿದೇಶದಿಂದ ಹಿಂತಿರುಗಿದ ಮೇಲೆ ಭಿನ್ನಮತ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕವಾಗದಿದ್ದರೆ ಸಂಭಾವ್ಯ ಅಸಮಾಧಾನವನ್ನು ತಡೆಗಟ್ಟುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ವಿಧಾನಪರಿಷತ್‍ನ ಉಪಚುನಾವಣೆ ಮತ್ತು ಮೇಯರ್-ಉಪಮೇಯರ್ ಚುನಾವಣೆ ಅಭ್ಯರ್ಥಿಗಳ ಬಗ್ಗೆಯೂ ಕೂಡ ನಾಯಕರು ಚರ್ಚಿಸಿದ್ದಾರೆ. ಬೆಳಗಾವಿಯ ಭಿನ್ನಮತ ಬೂದಿಮುಚ್ಚಿದ ಕೆಂಡದಂತಿದೆ. ಇದು ಯಾವ ಸಂದರ್ಭದಲ್ಲಿ ಬೆಂಕಿಯ ಜ್ವಾಲೆಯಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಾಗುತ್ತಿಲ್ಲ. ರಾಜಕೀಯವಾಗಿ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ. ಬಂಡುಕೋರರ ವಿರುದ್ದವೂ ಕಠಿಣ ಕ್ರಮಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಚರ್ಚೆ ನಡೆದಿದೆ.

ನಿನ್ನೆಯಷ್ಟೆ ಡಾ.ಜಿ.ಪರಮೇಶ್ವರ್ ಅವರು ಮಾಜಿ ಪ್ರಧಾನಿ ದೇವೆಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿವಾಸಕ್ಕೆ ತೆರಳಿ ಒಂದು ಗಂಟೆಗೂ ಹೆಚ್ಚು ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. 132 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಎಲ್ಲವನ್ನೂ ನಿಯಂತ್ರಿಸುವ ಶಕ್ತಿ ಇದೆ. ಯಾರು ಭಿನ್ನಮತೀಯ ಚಟುವಟಿಕೆಗಳು ನಡೆಸುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
ಇಂತಹ ಪರಿಸ್ಥಿತಿಯಲ್ಲಿ ಹೈಕಮಾಂಡ್ ನಾಯಕರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾದುನೋಡಬೇಕು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ