ಬೆಂಗಳೂರು, ಸೆ.14-ಕಾಂಗ್ರೆಸ್ ಶಾಸಕರನ್ನು ಸೆಳೆದು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಕ್ಕೆ ಕಾಂಗ್ರೆಸ್ ಐಟಿ ಅಸ್ತ್ರ ಬಳಸಲು ಮುಂದಾಗಿದೆ.
ಹಲವು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ್ದಾರೆಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಆದಾಯ ತೆರಿಗೆ ಮತ್ತು ಎಸಿಬಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ.
12 ಜನ ಶಾಸಕರಿಗೆ ಬಿಜೆಪಿ ಸುಮಾರು 20 ರಿಂದ 30 ಕೋಟಿ ರೂ.ಗಳಷ್ಟು ಹಣದ ಆಮಿಷವೊಡ್ಡಿರುವ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿರುವ ಮಾಹಿತಿಯನ್ನಾಧರಿಸಿ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಇಂದು ಈ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗಂಭೀರ ಚರ್ಚೆ ನಡೆಸಿದರು.
ನಂತರ ಮಾತನಾಡಿದ ಪರಮೇಶ್ವರ್ ಅವರು, ನಮ್ಮ ಯಾವುದೇ ಶಾಸಕರು ಹಣದ ಆಮಿಷಕ್ಕೆ ಬಲಿಯಾಗಿಲ್ಲ. ಆದರೆ ಮಾಧ್ಯಮಗಳಲ್ಲಿ 50 ಕೋಟಿ, 100 ಕೋಟಿ ಎಂದು ಸುದ್ದಿಗಳು ಬರುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಐಟಿ ಮತ್ತು ಎಸಿಬಿಗೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಹಣ ನೀಡುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಕೆಲವು ಶಾಸಕರು ನನಗೆ ಮಾಹಿತಿ ನೀಡಿದ್ದಾರೆ. ಹಾಗಾಗಿ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಐಟಿಯವರು ಬಿಜೆಪಿ ವಿರುದ್ಧ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಾರೆ ಎಂಬ ವಿಶ್ವಾಸವಿದೆ. ಯಾವ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂಬ ಮಾಹಿತಿ ನನ್ನ ಬಳಿ ಇದೆ. ಅದನ್ನೆಲ್ಲ ತಿಳಿಸಲು ಸಾಧ್ಯವಿಲ್ಲ. ಒಂದು ವೇಳೆ ಐಟಿಯವರು ಕ್ರಮಕೈಗೊಳ್ಳದಿದ್ದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.