ಬೆಳಗಾವಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಗೌರವ ರಕ್ಷೆ ಮೂಲಕ ಸ್ವಾಗತಿಸಲಾಯಿತು. ಈ ವೇಳೆ ಸ್ವಾಗತಿಸಲು ಆಗಮಿಸಿದ್ದ ಸಚಿವ ರಮೇಶ್ಜಾರಕಿಹೊಳಿ ಅವರ ಕೆನ್ನೆಯನ್ನು ಸವರಿ ಸಿಎಂ ಗಮನ ಸೆಳೆದರು.
ಕರ್ನಾಟಕ ಲಾ ಸಂಸ್ಥೆ ಹಾಗೂ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ 75 ನೇ ವರ್ಷಾಚರಣೆ ನಿಮಿತ್ತ ಜಿಐಟಿ ಕಾಲೇಜು ಆವರಣದಲ್ಲಿ ನಡೆಯಲಿರುವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾದರು.
ರಾಷ್ಟ್ರಪತಿ ಸೇರಿ ಗಣ್ಯರ ದಂಡು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಕುಂದಾ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ನಗರದ ರಸ್ತೆ, ಗೋಡೆ, ವೃತ್ತಗಳೆಲ್ಲವನ್ನು ಸುಣ್ಣ-ಬಣ್ಣದಿಂದ ಅಂದಗೊಳಿಸಲಾಗಿತ್ತು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಧ್ಯಾಹ್ನ ಸಾರ್ವಜನಿಕರನ್ನು ಭೇಟಿ ಮಾಡಿ, ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಸಿಎಂ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕ್ರಮಕ್ಕೆ ಗೈರಾಗಿರುವುದು ಇನ್ನಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.