ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ರಾಜ್ಯಪಾಲರಿಗೆ ದೂರು

ಬೆಂಗಳೂರು,ಸೆ.15- ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹಾಗೂ ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ತಿಳಿಸಿದರು.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಬಗ್ಗೆ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆ, ಎಸಿಬಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯಪಾಲರಿಗೆ ದೂರು ನೀಡುವುದಷ್ಟೇ ಅಲ್ಲ ಕಾನೂನು ಹೋರಾಟವನ್ನು ಕೈಗೊಳ್ಳುವುದಾಗಿ ಶರವಣ ತಿಳಿಸಿದರು.

ಈಗ ಗುಂಡುಪಿನ್ ತೋರಿಸಲಾಗಿದೆ. ಮುಂದೆ ಕಿಂಗ್‍ಪಿನ್, ಸೇಫ್ಟಿಪಿನ್ ಯಾರು ಎಂಬುದನ್ನು ತೋರಿಸಲಾಗುವುದು ಎಂದ ಅವರು, ಬಿಜೆಪಿಯ ಕೆಲವು ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ. ಸಮಾಜಕ್ಕೆ ಮೋಸ ಮಾಡುವ ಶಕ್ತಿಗಳ ಜೊತೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು.

ನಾಡಿನ ಬುದ್ದಿಜೀವಿಗಳೂ. ಮಠಾಧೀಶರು , ಸಾಹಿತಿಗಳು ಇದನ್ನೆಲ್ಲ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಋಣಮುಕ್ತ ಕಾಯ್ದೆ ಜಾರಿಗೆ ಮುಂದಾಗಿರುವುದನ್ನು ಸಹಿಸಲಾಗುತ್ತಿಲ್ಲ. ಮುಂದಿನ ಚುನಾವಣೆ ಬಿಜೆಪಿಗೆ ಸೋಲಿನ ಭೀತಿ ಕಾಡುತ್ತಿದೆ. ಹಾಗಾಗಿ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರವನ್ನು ಕೆಡವಲು 50 ರಿಂದ 100 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ನಾವು ನಮ್ಮ ಅಸ್ತ್ರ ಬಿಡಬೇಕಾಗುತ್ತದೆ. ಅದೇ ಬಿಜೆಪಿಗೆ ತಿರುಗುಬಾಣವಾಗಲಿದೆ. ಮೊದಲು ವಿರೋಧ ಪಕ್ಷದ ಸ್ಥಾನದಲ್ಲಿ ನಿಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಎಂದು ಹೇಳಿದರು.

ಅಧಿಕಾರ ದಾಹಕ್ಕಾಗಿ ಬಿಜೆಪಿ ನಾಯಕರು ಮಾಡುತ್ತಿರುವ ಪ್ರಯತ್ನಕ್ಕೆ ಅಮಿತ್ ಷಾ ಹಾಗೂ ನರೇಂದ್ರಮೋದಿಯವರ ಬೆಂಬಲವಿದೆಯೇ ಎಂದು ಆರ್.ಪ್ರಕಾಶ್ ಪ್ರಶ್ನಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಆಪರೇಷನ್ ಕಮಲವನ್ನು ಈಗಲೂ ಮುಂದುವರೆಸುವ ಪ್ರಯತ್ನ ಮಾಡಲಾಗುತ್ತಿದೆ. ನಾಡಿನ ಮಠಾಧೀಶರು ಮಧ್ಯಪ್ರವೇಶಿಸಬೇಕು, ಮಠಾಧೀಶರ ಬಗ್ಗೆ ನಮಗೆ ಗೌರವವಿದೆ. ಇನ್ನೆರಡು ದಿನಗಳ ಕಾಲ ಕಾದು ನೋಡುತ್ತೇವೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮುಂದುವರೆದರೆ ಅದರ ವಿರುದ್ದ ಜನಾಂದೋಲನ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಜೆಡಿಎಸ್ ಮುಖಂಡರಾದ ನಾರಾಯಣಸ್ವಾಮಿ, ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ