ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವದೇಶಕ್ಕೆ ವಾಪಸ್ಸಾಗಿದ್ದು, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ವಾಪಸ್ ಆಗಿರುವುದರಿಂದ ರಾಜ್ಯ ಕಾಂಗ್ರೆಸ್ ನಲ್ಲಿ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇನ್ನು ಜಾರಕಿಹೊಳಿ ಸಹೋದರರ ವಿಚಾರದ ಬಗ್ಗೆಯಾಗಲಿ, ಬಿಜೆಪಿ ಆಪರೇಷನ್ ಕಮಲದ ಬಗ್ಗೆಯಾಗಲಿ ಯಾವುದರ ಬಗ್ಗೆಯೂ ನನಗೆ ಗೊತ್ತಿಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪನವರು ಯಾವಾಗಲೂ ಸುಳ್ಳುಹೇಳಿಕೆಗಳನ್ನು ನೀಡುತ್ತಾರೆ. ಅಗತ್ಯಬಿದ್ದರೆ ಸಮನ್ವಯ ಸಮಿತಿ ಕರೆದು ಚರ್ಚೆ ನಡೆಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ನಡುವೆ ಸಮ್ಮಿಶ್ರ ಸರ್ಕಾರದ ಮೈತ್ರಿಗೆ ಕಗ್ಗಂಟಾಗಿರುವ ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬಣಗಳ ನಡುವಿನ ಭಿನ್ನಮತವನ್ನು ಬಗೆಹರಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರು ಪರಿಹಾರ ನೀಡಬಹುದು ಎಂಬುದು ಎಲ್ಲರ ನಿರೀಕ್ಷೆಯಾಗಿದೆ.