ಬೆಂಗಳೂರು,ಸೆ.16-ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿನ ಭಿನ್ನಮತ ಅತೃಪ್ತ ಶಾಸಕರ ಅಸಮಾಧಾನ, ಆಪರೇಷನ್ ಕಮಲಕ್ಕೆ ಮುಂದಾಗಿರುವ ವಿಚಾರ ಸೇರಿದಂತೆ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಚರ್ಚೆ ನಡೆಸಿದ್ದಾರೆ.
ಸಿದ್ದರಾಮಯ್ಯನವರ ನಿವಾಸದಲ್ಲಿ ಇಂದು ಬೆಳಗ್ಗೆ ವೇಣುಗೋಪಾಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಅಜಯ್ ಸಿಂಗ್ ಕೂಡ ಮಾತುಕತೆ ಸಂದರ್ಭದಲ್ಲಿ ಹಾಜರಿದ್ದು, ಕಾಂಗ್ರೆಸ್ನಲ್ಲಿನ ಆಂತರಿಕ ಭಿನ್ನಮತದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಆಡಳಿತ ಪಕ್ಷಗಳ ಸುಮಾರು 20 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹರಡಿದೆ. ಇದರ ಬೆನ್ನಲ್ಲೇ ಆಪರೇಷನ್ ಕಮಲವನ್ನು ಬಿಜೆಪಿ ಮಾಡಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆಯುತ್ತಿವೆ. ಈ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಸಿ ಸಮ್ಮಿಶ್ರ ಸರ್ಕಾರ ಎದುರಿಸುತ್ತಿರುವ ಮುಜುಗರವನ್ನು ಪರಿಹರಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚಿಸಿದ್ದಾರೆ.
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಹೋದರರ ನಡೆ ಅತೃಪ್ತ ಶಾಸಕರು ಅನುಸರಿಸುತ್ತಿರುವ ಮಾರ್ಗ ಎಲ್ಲವುಗಳ ಬಗ್ಗೆ ಚರ್ಚಿಸಿರುವ ಕಾಂಗ್ರೆಸ್ ನಾಯಕರು ಮುಂದೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ.
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ, ಆಂತರಿಕ ಭಿನ್ನಮತ ಶಮನಗೊಳಿಸುವ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ.