ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 68ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರಿಗೆ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.
ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ರಾಜಕೀಯ ಮುಖಂಡರು, ಗಣ್ಯರು ಸೋಶಿಯಲ್ ಮೀಡಿಯಾಗಳ ಮೂಲಕ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಇಲ್ಲಿ ಶಾಲಾ ಮಕ್ಕಳೊಂದಿಗೆ ಒಂದು ದಿನವನ್ನು ಪ್ರಧಾನಿ ಕಳೆಯಲಿದ್ದಾರೆ.
ಇಂದು ಮತ್ತು ನಾಳೆ ಪ್ರಧಾನಿಯ ವಾರಾಣಾಸಿ ಭೇಟಿ ನಿಗದಿಯಾಗಿದ್ದು, ಕಾಶಿ ವಿಶ್ವನಾಥ ದೇಗುಲದಲ್ಲಿ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಬಳಿಕ ಶಾಲಾ ಮಕ್ಕಳ ಜತೆ ಕಾಲ ಕಳೆಯಲಿದ್ದಾರೆ.
ಪ್ರಧಾನಿ ಮೋದಿ ಜನ್ಮದಿನ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ. ಮೋದಿ ಅವರಿಗೆ ದೀರ್ಘಾಯುಷ್ಯದೊರೆತು ದೇಶಕ್ಕೆ ಇನ್ನಷ್ಟು ಸೇವೆ ದೊರೆಯಲಿ ಎಂದು ಆಶಿಸಿದ್ದಾರೆ.
ಸಚಿವ ಅರುಣ್ ಜೈಟ್ಲಿ, ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಟ್ವಿಟ್ಟರ್ ನಲ್ಲಿ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.