ಎ.ಜೆ.ಸದಾಶಿವ ಆಯೋಗ ವರದಿಯನ್ನು ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸಿಗೆ ಒತ್ತಾಯ

Varta Mitra News

ಬೆಂಗಳೂರು, ಸೆ.18- ಎ.ಜೆ.ಸದಾಶಿವ ಆಯೋಗ ವರದಿಯನ್ನು ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಸಮನ್ವಯ ಸಮಿತಿ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಆನಂದ್ ಮಾತನಾಡಿ, ಸದಾಶಿವ ಆಯೋಗ ವರದಿ ಸಿದ್ಧಗೊಂಡ ನಂತರ ಇಲ್ಲಿವರೆಗೂ ಆಡಳಿತ ನಡೆಸಿದ ಸರ್ಕಾರಗಳು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಲ್ಲಿ ತಾತ್ಸಾರ ಮನೋಭಾವ ತೋರಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನವೆಂಬರ್ 30ರ ತನಕ ಗಡುವು ನೀಡಲಾಗುವುದು. ಸದಾಶಿವ ಆಯೋಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಏಳು ವರ್ಷಗಳಾಗಿವೆ. ಆದರೆ, ವರದಿ ಆಜರಿಗೆ ಸರ್ಕಾರಗಳು ಆಸಕ್ತಿ ತೋರದ ಹಿನ್ನೆಲೆಯಲ್ಲಿ ದಲಿತ ಸಮುದಾಯವು ತಳೆದ ರಾಜಕೀಯ ನಿರ್ಧಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷವೂ ಬಹುಮತ ಪಡೆಯುವಲ್ಲಿ ವಿಫಲವಾದುದರಿಂದ ಅತಂತ್ರ ಪರಿಸ್ಥಿತಿಗೆ ಕಾರಣವಾಯಿತು ಎಂದು ಹೇಳಿದರು.

101 ದಲಿತ ಜಾತಿಗಳಲ್ಲಿ ಮಾದಿಗ ಸಮುಆಯ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದು, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದೆ. ಮೀಸಲಾತಿ ಸೌಲಭ್ಯ ಅರ್ಹರಿಗೆ ದೊರೆಯದೆ ಇರುವುದರಿಂದ ದಲಿತರು ಹಿಂದುಳಿಯಲು ಕಾರಣವಾಗಿದೆ ಎಂದು ಹೇಳಿದರು.
ಕೂಡಲೇ ಜನಸಂಖ್ಯೆವಾರು ಮೀಸಲಾತಿ ನಿಗದಿಪಡಿಸಿರುವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಆನಂದ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ನರಸಪ್ಪ ದಂಡೋರ, ಸಿ.ಕೆ.ಪಾಪಣ್ಣ, ರಮೇಶ್ ಚಕ್ರವರ್ತಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ