ಬೆಂಗಳೂರು, ಸೆ.18- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಉಂಟಾಗಿರುವ ನಡುವೆಯೇ ಬಿಜೆಪಿಯ ಕೇಂದ್ರ ನಾಯಕರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಇಂದು ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೇಂದ್ರ ವರಿಷ್ಠರ ಸೂಚನೆ ಮೇರೆಗೆ ಈ ಇಬ್ಬರು ನಾಯಕರು ಆಗಮಿಸುತ್ತಿರುವುದರಿಂದ ಬಿಜೆಪಿ ಪಾಳಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿದೆ.
ರಾಜ್ಯ ರಾಜಕೀಯದಲ್ಲಾಗುತ್ತಿರುವ ಬದಲಾವಣೆಗಳ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ಮಾಹಿತಿ ಪಡೆಯುತ್ತಿರುವ ಅಮಿತ್ ಶಾ ಈಗ ಪರಿಸ್ಥಿತಿ ಅವಲೋಕಿಸಲು ಪ್ರಕಾಶ್ ಜಾವ್ಡೇಕರ್ ಮತ್ತು ಮುರುಳೀಧರ ರಾವ್ ಅವರನ್ನು ಕಳುಹಿಸಿಕೊಡುತ್ತಿದ್ದಾರೆ.
ದೂರವಾಣಿ ಮೂಲಕ ನಿರಂತರವಾಗಿ ಅಮಿತ್ ಶಾ ಮಾಹಿತಿ ಪಡೆಯುತ್ತಿದ್ದಾರೆ. ರಾಜ್ಯದ ಮೈತ್ರಿ ಸರ್ಕಾರ ಪತನವಾಗುವುದು ಖಚಿತ ಎನಿಸಿದೆ. ಇದೇ ಹಿನ್ನೆಲೆಯಲ್ಲಿ ಅವರು ನಾಳೆ ಬಿಜೆಪಿ ಶಾಸಕಾಂಗ ಸಭೆ ಕರೆಯುವಂತೆ ಯಡಿಯೂರಪ್ಪಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಉಪಸ್ಥಿತರಿರುವಂತೆ ಪ್ರಕಾಶ್ ಜಾವ್ಡೇಕರ್ ಮತ್ತು ಮುರಳೀಧರಾವ್ ಗೂ ತಿಳಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಕೆಲವು ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಪ್ರಯತ್ನಿಸುತ್ತಿರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡುವಂತೆ, ಶಾಸಕರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಜೊತೆಗೆ ಯಾವ ಶಾಸಕ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಕಲೆಹಾಕಿ ಕೂಡಲೇ ಮನವೊಲಿಸುವಂತೆ ರಾಜ್ಯ ನಾಯಕರಿಗೆ ಮತ್ತು ಉಸ್ತುವಾರಿಗಳಿಗೆ ಅಮಿತ್ ಶಾ ತಾಖೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.