ಮುಖ್ಯಮಂತ್ರಿಯಿಂದ ಶೃಂಗೇರಿ ಶಾರದಾಂಬೆಯ ಮೊರೆ

ಬೆಂಗಳೂರು, ಸೆ.21 ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶೃಂಗೇರಿ ಶಾರದಾಂಬೆಯ ಮೊರೆ ಹೋಗಲಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನಿಂದ ತೆರಳುವ ಮುಖ್ಯಮಂತ್ರಿ ರಾತ್ರಿ ಶೃಂಗೇರಿ ತಲುಪಲಿದ್ದಾರೆ. ನಾಳೆ ಬೆಳಗ್ಗೆ ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿರುವ ಮುಖ್ಯಮಂತ್ರಿಗಳು ಈಗಲೂ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯುವುದನ್ನು ಮುಂದುವರಿಸಿದ್ದಾರೆ.

ಈಗಾಗಲೇ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಾಳೆ ಚಿಕ್ಕಮಗಳೂರಿನಲ್ಲಿ ಹಾಗೂ ಭಾನುವಾರ ಹಾಸನ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿಗಳು ನೆರೆ ಬರದ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಜತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಲಿದ್ದಾರೆ.
ನಾಳೆ ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವಿದೆ. ಅಲ್ಲದೆ, ಅತಿವೃಷ್ಟಿ, ಅನಾವೃಷ್ಟಿಯಿಂದ ಉಂಟಾಗಿರುವ ಹಾನಿ, ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ನಾಳೆ ರಾತ್ರಿ ಹಾಸನದಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿಗಳು ಭಾನುವಾರ ಬೆಳಗ್ಗೆ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಹೇಮಾವತಿ ನದಿಯಿಂದ ದುದ್ದ, ಶಾಂತಿಗ್ರಾಮ ಹೋಬಳಿಯ 187 ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ.
ಹೇಮಾವತಿ ನದಿಯಿಂದ ದುದ್ದ, ಶಾಂತಿಗ್ರಾಮ ಹೋಬಳಿಯ 160 ಕೆರೆಗಳಿಗೆ ಮತ್ತು 10 ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೂ ಅಡಿಗಲ್ಲು ಹಾಕಲಿದ್ದಾರೆ. ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದು, ನಂತರ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡು ಅಂದು ಸಂಜೆ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ