ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸಲು ಜೆಡಿಎಸ್-ಕಾಂಗ್ರೆಸ್ ಗಂಭೀರ ಚಿಂತನೆ

ಬೆಂಗಳೂರು, ಸೆ.21ರಾಜ್ಯದ ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿವೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ 20 ಕ್ಷೇತ್ರಗಳಲ್ಲಿ ಮಿತ್ರಪಕ್ಷಗಳು ಗೆಲುವು ಸಾಧಿಸಬಹುದೆಂಬ ಲೆಕ್ಕಾಚಾರ ಹಾಕಲಾಗಿದೆ.

ಉಭಯ ಪಕ್ಷಗಳ ನಡುವೆ ಕ್ಷೇತ್ರವಾರು ಹೊಂದಾಣಿಕೆ ಸಂಬಂಧ ತೆರೆಮರೆಯಲ್ಲಿ ಮಾತುಕತೆಗಳು ನಡೆಯುತ್ತಿವೆ. ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಲೋಕಸಭೆ ಚುನಾವಣೆ ಎದುರಿಸಿದರೆ ಕನಿಷ್ಟ 15 ರಿಂದ 20 ಸ್ಥಾನಗಳನ್ನು ಗೆಲ್ಲಬಹುದು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದಾಗಿದೆ.
ಜೆಡಿಎಸ್ ಈಗಾಗಲೇ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಉತ್ಸುಕವಾಗಿದೆ. ಲೋಕಸಭೆ ಚುನಾವಣೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಕಾಂಗ್ರೆಸ್ ಪಕ್ಷದ ಮುಂದಿಟ್ಟಿದ್ದು, ಇನ್ನೂ ಅಂತಿಮ ನಿರ್ಧಾರ ಆಗಿಲ್ಲ.

ಬಿಜೆಪಿ ಪ್ರಬಲವಾಗಿರುವ ಕೆಲವು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲೂ ಮಿತ್ರಪಕ್ಷಗಳಿಗೆ ಅನುಕೂಲಕರವಾದ ವಾತಾವರಣವಿದೆ. ಒಂದು ವೇಳೆ ಮೈತ್ರಿ ಮಾಡಿಕೊಳ್ಳದೆ ಚುನಾವಣೆ ಎದುರಿಸಿದರೆ ವಿರೋಧಪಕ್ಷವಾದ ಬಿಜೆಪಿಗೆ ಹೆಚ್ಚಿನ ಲಾಭವಾಗುತ್ತದೆ. ಬಿಜೆಪಿ ಮಣಿಸಲು ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಬೇಕಾದ ಅನಿವಾರ್ಯತೆಯನ್ನು ರಾಜಕೀಯ ಮುಖಂಡರು ಮಾತುಕತೆ ವೇಳೆ ಪ್ರಸ್ತಾಪಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದವು. ರಾಜ್ಯದ ಸಮ್ಮಿಶ್ರ ಸರ್ಕಾರದ ರೈತರ ಸಾಲಮನ್ನಾ, ಮೀಟರ್ ಬಡ್ಡಿಗೆ ಕಡಿವಾಣ, ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳು ಮಿತ್ರಪಕ್ಷ ಚುನಾವಣೆಯಲ್ಲಿ ವರವಾಗಿ ಪರಿಣಮಿಸಲಿವೆ ಎಂಬ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ.

ಮೈತ್ರಿ ಸರ್ಕಾರಕ್ಕೆ ಪರೋಕ್ಷವಾಗಿ ತೊಂದರೆ ಕೊಡುತ್ತಿದೆ ಎಂದು ಬಿಜೆಪಿ ಮೇಲೆ ಈಗಾಗಲೇ ಉಭಯ ಪಕ್ಷಗಳು ಆರೋಪ ಹೊರಿಸಿವೆ. ಸದ್ಯದ ಮಟ್ಟಿಗೆ ಬಿಜೆಪಿಯನ್ನು ಕಾಂಗ್ರೆಸ್-ಜೆಡಿಎಸ್ ಎದುರಾಳಿ ಪಕ್ಷವೆಂದೇ ಬಿಂಬಿಸುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಮೈತ್ರಿ ಮುಂದುವರಿಸಲಿವೆಯೇ ಅಥವಾ ಏಕಾಂಗಿಯಾಗಿ ಸ್ಪರ್ಧಿಸಲಿವೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ