ಬೆಂಗಳೂರು, ಸೆ.21 ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಜೆಡಿಎಸ್ನ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ನಾಳೆ ಕರೆಯಲಾಗಿದೆ.
ಹಾಸನದಲ್ಲಿ ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.
ನಾಳೆ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಹಾಸನದಲ್ಲಿ ನಡೆಯಲಿದ್ದು, ನಂತರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ವಿಧಾನಪರಿಷತ್ನ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ , ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡುವುದು, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತದೆ.
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಈಗಾಗಲೇ ಜೆಡಿಎಸ್ ಆರೋಪಿಸಿದೆ. ಜೆಡಿಎಸ್ನ ಎಲ್ಲಾ ಶಾಸಕರು ಒಗ್ಗಟ್ಟಿನಿಂದಿದ್ದು, ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು. ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಒಳಗಾಗಬಾರದು. ಒಂದು ವೇಳೆ ಬಿಜೆಪಿಯವರು ಸಂಪರ್ಕ ಮಾಡಿದರೂ ಮಣಿಯದೆ ವರಿಷ್ಠರ ಗಮನಕ್ಕೆ ತರುವಂತೆ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಸಲಹೆ ಮಾಡುವ ಸಾಧ್ಯತೆಗಳಿವೆ. ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸರ್ಕಾರ ಉಳಿಸಿಕೊಂಡು ಮುನ್ನಡೆಸುವ ಕಡೆ ಗಮನ ಹರಿಸಬೇಕು.
ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತೆ ಕಡೆ ಹೆಚ್ಚಿನ ಗಮನಹರಿಸಬೇಕು. ಹೆಚ್ಚು ಸ್ಥಾನ ಗೆಲ್ಲಲು ಅನುಕೂಲವಾಗುವಂತೆ ಈಗಿನಿಂದಲೇ ತಯಾರಿ ನಡೆಸಬೇಕು. ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ವಿರೋಧ ಪಕ್ಷವಾದ ಬಿಜೆಪಿ ಅಧಿಕಾರ ಗಳಿಸಲು ಪರೋಕ್ಷ ಮಾರ್ಗವನ್ನು ಅನುಸರಿಸುತ್ತಿದ್ದು, ಸಮ್ಮಿಶ್ರ ಸರ್ಕಾರದ ಅಭಿವೃದ್ಧಿಗೆ ಹಿನ್ನಡೆಯಾಗುವಂತೆ ಆಗಾಗ್ಗೆ ಅಡ್ಡಿಪಡಿಸುವ ಕಾರ್ಯಗಳನ್ನು ಮಾಡುತ್ತಿರುತ್ತದೆ. ಬಿಜೆಪಿ ಉಂಟು ಮಾಡುವ ರಾಜಕೀಯ ಗೊಂದಲ ಹಾಗೂ ಮಿತ್ರ ಪಕ್ಷವಾದ ಕಾಂಗ್ರೆಸ್ನಲ್ಲಿನ ಆತಂರಿಕ ಅಸಮಾಧಾನಗಳ ಬಗ್ಗೆ ಶಾಸಕರು ಹೆಚ್ಚು ಗಮನ ಹರಿಸಬೇಕಿಲ್ಲ. ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ತೊಂದರೆಗಳು ಉಂಟಾಗಿದ್ದರೆ, ವರಿಷ್ಠರ ಗಮನಕ್ಕೆ ತಂದು ಸರಿಪಡಿಸಿಕೊಳ್ಳುವಂತೆ ಸಲಹೆ ಮಾಡಲಾಗುವುದು. ಯಾವುದೇ ಶಾಸಕರನ್ನು ಸರ್ಕಾರದಲ್ಲಿ ಕಡೆಗಣಿಸುವುದಿಲ್ಲ. ಸಮ್ಮಿಶ್ರ ಸರ್ಕಾರವಾಗಿರುವುದರಿಂದ ವಿಳಂಬ ವಾಗಿರಬಹುದಷ್ಟೇ. ಪಕ್ಷದಲ್ಲಿನ ಅಸಮಾಧಾನ, ಭಿನ್ನಾಭಿಪ್ರಾಯಗಳೇ ಬಿಜೆಪಿಗೆ ಅಸ್ತ್ರವಾಗಲು ಅವಕಾಶ ಮಾಡಿಕೊಡಬಾರದು. ಯಾವುದೇ ಕಾರಣಕ್ಕೂ ಬಿಜೆಪಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ಮಾಡಿಕೊಡದಂತೆ ಒಗ್ಗಟ್ಟಿನಿಂದ ಇರಬೇಕು ಎಂಬ ಸಲಹೆ ಶಾಸಕಾಂಗ ಪಕ್ಷದಲ್ಲಿ ಮಾಡುವ ಸಾಧ್ಯತೆ ಇದೆ.