ಬೆಂಗಳೂರು, ಸೆ.25- ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರುಕಟ್ಟೆಯನ್ನು ಮತ್ತಷ್ಟು ವ್ಯಾಪಕಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಬಮೂಲ್ (ಬೆಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘ)ಗುಜರಾತ್ನ ಅಮೂಲ್ ಸಂಸ್ಥೆಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿಕೊಳ್ಳುವ ಚಿಂತನೆ ನಡೆಸಿದೆ.
ಹಾಲಿನ ಪೌಡರ್, ಬೆಣ್ಣೆ, ತುಪ್ಪ ಇನ್ನಿತರ ಹಾಲಿನ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಮಾರುಕಟ್ಟೆ ಒದಗಿಸುವ ಮೂಲಕ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ.
ಹಾಲು ಉತ್ಪನ್ನಗಳಲ್ಲಿ ದೇಶದಲ್ಲೇ ನಂ.1 ಆದ ಅಮೂಲ್ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ರತ್ನಂ ಅವರನ್ನು ಬಮೂಲ್ಗೆ ನೇಮಿಸಿಕೊಂಡು ಅವರ ಸೇವೆ ಪಡೆಯುವ ಮೂಲಕ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ಆಂಜನಪ್ಪ ತಿಳಿಸಿದ್ದಾರೆ.
ಬಮೂಲ್ನ ಸರ್ವಸದಸ್ಯರ ವಾರ್ಷಿಕ ಸಭೆ ಇಂದು ನಡೆಯಲಿದ್ದು, ಸದಸ್ಯರೊಂದಿಗೆ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ರೈತರು, ಇನ್ನಿತರರು ಹೈನುಗಾರಿಕೆ ಅವಲಂಬಿಸಿ ಉತ್ತಮ ಬದುಕು ಸಾಗಿಸುತ್ತಿದ್ದಾರೆ. ನಿರೀಕ್ಷೆಗೂ ಮೀರಿದ ಹಾಲು ಉತ್ಪನ್ನ ಆಗುತ್ತಿದೆ. ಇದಲ್ಲದೆ, ಉಪ ಉತ್ಪನ್ನಗಳನ್ನು ಕೂಡ ಹೆಚ್ಚಾಗಿ ಮಾಡಲಾಗುತ್ತಿದೆ. ದೇಶೀಯ ಮಾರುಕಟ್ಟೆ ಜತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಾರುಕಟ್ಟೆ ಕಂಡುಕೊಳ್ಳುವ ನಿಟ್ಟಿನಲ್ಲಿ ಸತತ ಪ್ರಯತ್ನ ಮಾಡಲಾಗುತ್ತಿದೆ. ಲಾಭದಾಯಕವಾಗಿರುವ ಉದ್ಯಮವನ್ನು ಅವಲಂಬಿಸಿರುವ ಎಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಕಾರ್ಯಾನುಷ್ಠಾನ ಮಾಡಲಾಗುತ್ತಿದೆ. ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಬೇರೆ ರಾಜ್ಯಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ನಿವೃತ್ತ ಹಿರಿಯ ಅಧಿಕಾರಿಗಳ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.