ಕುಡಿಯುವ ನೀರು, ಉದ್ಯೋಗ ಒದಗಿಸಲು ಆದ್ಯತೆ

ಬೆಂಗಳೂರು, ಸೆ.27-ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರು, ಉದ್ಯೋಗ ಒದಗಿಸಲು ಆದ್ಯತೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೃಷ್ಣಭೆರೇಗೌಡ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿಂದು ನಡೆದ ಜಿ.ಪಂ. ಸಿಇಒಗಳ ಸಮ್ಮೇಳನದಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಇದ್ದು ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಹೊಸ ಕೊಳವೆ ಬಾವಿಕೊರೆಸುವುದು, ನೀರಿನ ಸಮಸ್ಯೆ ತೀವ್ರವಾಗಿ ಇರುವ ಕಡೆ ಟ್ಯಾಂಕರ್ ಮೂಲಕ ನೀರು ಒದಗಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಅರಸಿ ಗುಳೇ ಹೋಗುವ ಸಾಧ್ಯತೆ ಹೆಚ್ಚಾಗಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸಾಕಷ್ಟು ಉದ್ಯೋಗವನ್ನು ಜನರಿಗೆ ಒದಗಿಸಿ ಗುಳೇ ಹೋಗುವುದನ್ನು ತಪ್ಪಿಸಬೇಕೆಂದು ಸೂಚಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ಶೌಚಾಲಯ ನಿರ್ಮಾಣ ಕಾರ್ಯವೂ ತ್ವರಿತ ಗತಿಯಲ್ಲಿ ಪೂರ್ಣಗೊಳ್ಳಬೇಕು. ನೆರೆಪೀಡಿತ ಪ್ರದೇಶಗಳಲ್ಲಿ ಹಾಳಾಗಿರುವ ಗ್ರಾಮೀಣ ರಸ್ತೆಗಳನ್ನು ದುರಸ್ತಿ ಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲಾವಾರು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಕಾಲದಲ್ಲಿ ಸೇವೆಗಳನ್ನು ಒದಗಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ