ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಲು ಆಯೋಗ ಸಿದ್ದತೆ

 

ಬೆಂಗಳೂರು,ಸೆ.29- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಜೊತೆಗೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಲು ಸಿದ್ದತೆ ನಡೆಸಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ಹಾಗೂ ಮಾಜಿ ಸಚಿವ ಸಿದ್ದು ನ್ಯಾಮೇಗೌಡ ನಿಧನದಿಂದ ತೆರವಾಗಿರುವ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ಮುಂದಿನ ವಾರ ಚುನಾವಣೆಯ ದಿನಾಂಕವನ್ನು ನಿಗದಪಡಿಸುವ ಸಾಧ್ಯತೆಗಳು ಹೆಚ್ಚಾಗಿದೆ.

ಈಗಾಗಲೇ ರಾಜ್ಯ ಚುನಾವಣಾಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದಿರುವ ಕೇಂದ್ರ ಚುನಾವಣಾ ಆಯೋಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚ್ಯವಾಗಿ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

ಡಿಸೆಂಬರ್ ಅಂತ್ಯಕ್ಕೆ ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ, ಛತ್ತೀಸ್‍ಘಡ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದ್ದು, ಈ ವೇಳೆ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ದಿನಾಂಕವನ್ನು ಘೋಷಿಸಲಿದೆ.
ಆದರೆ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಮೂರು ಲೋಕಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗಿದೆ.
ಸಂಸದರಾಗಿದ್ದ ಸಿ.ಎಸ್.ಪುಟ್ಟರಾಜು(ಮಂಡ್ಯ),ಬಿ.ಎಸ್.ಯಡಿಯೂರಪ್ಪ(ಶಿವಮೊಗ್ಗ) ಹಾಗೂ ಶ್ರೀರಾಮುಲು(ಬಳ್ಳಾರಿ) ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವುದರಿಂದ ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಏಕೆ ಉಪಚುನಾವಣೆ:
ಕಳೆದ ಮೇ ತಿಂಗಳಿನಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ವಿಜೇತರಾಗಿದ್ದರು.
ನಿಯಮದ ಪ್ರಕಾರ ಒಬ್ಬ ಅಭ್ಯರ್ಥಿ ಎಷ್ಟು ಕ್ಷೇತ್ರದಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಆದರೆ ಅವರು ಒಂದೇ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದರಿಂದ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ಇನ್ನು ದೆಹಲಿಯಿಂದ ಗೋವಾ ಮೂಲಕ ತಮ್ಮ ಸ್ವಕ್ಷೇತ್ರಕ್ಕೆ ತೆರಳುತ್ತಿದ್ದ ಮಾಜಿ ಸಚಿವ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಸಿದ್ದು ನ್ಯಾಮೇಗೌಡ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರಿಂದ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.

ರಾಮನಗರದಿಂದ ಕುಮಾರಸ್ವಾಮಿ ಅವರ ಪತ್ನಿ ಅನಿತಾಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರೆ, ಜಮಖಂಡಿಯಿಂದ ಸಿದ್ದು ನ್ಯಾಮೇಗೌಡರ ಪುತ್ರ ಆನಂದ್ ನ್ಯಾಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದರಿಂದ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲಿಸಿದರೆ, ಜಮಖಂಡಿಯಲ್ಲಿ ಕಾಂಗ್ರೆಸ್‍ಗೆ ಜೆಡಿಎಸ್ ಬೆಂಬಲಿಸಲಿದೆ.

ಬಿಜೆಪಿ ಈ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದು ಕೊಂಡಿರುವುದರಿಂದ ರಾಮನಗರಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಜಮಖಂಡಿಗೆ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಅವರನ್ನು ಕಣಕ್ಕಿಳಿಸುವ ಸಂಭವವಿದೆ.
ಲೋಕಸಭೆಗಿಲ್ಲ ಉಪಸಮರ: ಮಂಡ್ಯ, ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ಸಾಧ್ಯತೆಗಳು ಕ್ಷೀಣವಾಗಿದೆ. ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ ಯಾವುದೇ ಒಬ್ಬ ಅಭ್ಯರ್ಥಿ ತಾವು ಪ್ರತಿನಿಧಿಸುವ ಕ್ಷೇತ್ರದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೆ ತೆರವಾಗಲಿರುವ ಸ್ಥಾನಕ್ಕೆ 6 ತಿಂಗಳೊಳಗೆ ಚುನಾವಣೆ ನಡೆಸಬೇಕೆಂಬ ನಿಯಮವಿದೆ. ಆದರೆ ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳಿರುವುದರಿಂದ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಚುನಾವಣಾ ಆಯೋಗ ಈ ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸದಿರಲು ತೀರ್ಮಾನಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ