ಬೆಂಗಳೂರು, ಅ.2-ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.
ಜಮಖಂಡಿ, ರಾಮನಗರ ಕ್ಷೇತ್ರಗಳಲ್ಲಿ ಪರಸ್ಪರ ಕೊಡು-ಕೊಳ್ಳುವ ಸೂತ್ರ ಅನುಸರಿಸಲು ಉಭಯ ಪಕ್ಷಗಳು ನಿರ್ಧರಿಸಿವೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಿದರೆ, ಜಮಖಂಡಿಯಲ್ಲಿ ಕಾಂಗ್ರೆಸ್ಗೆ ಜೆಡಿಎಸ್ ಬೆಂಬಲ ನೀಡಲು ಮಾತುಕತೆ ನಡೆದಿದೆ.
ಜಮಖಂಡಿಯ ಶಾಸಕರಾಗಿದ್ದ ಸಿದ್ದುನ್ಯಾಮಗೌಡ ಅವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಈ ಕ್ಷೇತ್ರದಲ್ಲಿ ಅವರ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಆದ್ದರಿಂದ ಜೆಡಿಎಸ್ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ಗೆ ಬೆಂಬಲ ನೀಡಲಿದೆ.
ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಇಟ್ಟುಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಜೆಡಿಎಸ್ನ ಭದ್ರಕೋಟೆಯಾದ ರಾಮನಗರದಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಇಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಲು ಮುಂದಾಗಿದೆ.