ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಪಾಲಿಸಲು ಕೇರಳ ಸರ್ಕಾರ ಬದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇರಳ ಸಿಎಂ, ರಾಜ್ಯ ಸರ್ಕಾರ ಸುಪ್ರೀಂ ಆದೇಶ ಪಾಲಿಸಲು ಬದ್ಧವಾಗಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ನಾಲ್ಕು ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸುಪ್ರೀಂ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೇರಳ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದರು.