ಜೆಡಿಎಸ್ ಪಕ್ಷದ ಕಾರ್ಯಕರ್ತರ ಮಹತ್ವದ ಸಭೆ

ಬೆಂಗಳೂರು, ಅ.3- ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಮಹತ್ವದ ಸಭೆ ನಡೆಸಿದರು.
ಚುನಾವಣಾ ಪೂರ್ವ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಕಾರ್ಯಕರ್ತರೊಂದಿಗೆ ಮುಕ್ತವಾಗಿ ಸಮಾಲೋಚನೆ ನಡೆಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡೂ ಚುನಾಯಿತರಾಗಿದ್ದ ಕುಮಾರಸ್ವಾಮಿ ಅವರು ನಂತರ ರಾಮನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹಾಗಾಗಿ ರಾಮನಗರ ಕ್ಷೇತ್ರಕ್ಕೆ ಸದ್ಯದಲ್ಲೇ ಉಪಚುನಾವಣೆ ಎದುರಾಗಲಿದ್ದು, ಚುನಾವಣೆ ಪೂರ್ವ ತಯಾರಿ ಬಗ್ಗೆ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಬಿಜೆಪಿ ರಾಮನಗರ ಉಪಚುನಾವಣೆಯಲ್ಲಿ ಪ್ರಬಲವಾದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ತೀವ್ರ ಪ್ರತಿಸ್ಪರ್ಧೆ ನೀಡುವ ನಿರೀಕ್ಷೆ ಹಿನ್ನೆಲೆಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯ ಗೆಲುವಿಗಾಗಿ ಅನುಸರಿಸಬೇಕಾಗಿರುವ ಚುನಾವಣಾ ತಂತ್ರಗಳ ಬಗ್ಗೆಯೂ ಗಂಭೀರ ಸಮಾಲೋಚನೆ ನಡೆಸಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಕುಮಾರಸ್ವಾಮಿ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈಗಾಗಲೇ ನಿರ್ಧರಿಸಿರುವಂತೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗುತ್ತಿದೆಯಾದರೂ ಇನ್ನು ಅವರು ಸ್ಪರ್ಧೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರವಾಗಿಲ್ಲ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿರುವುದರಿಂದ ಉಪಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳುವ ವಿಚಾರದ ಬಗ್ಗೆ ಸ್ಥಳೀಯ ಜೆಡಿಎಸ್ ಕಾರ್ಯಕರ್ತರ ಮತ್ತು ಮುಖಂಡರ ಅಭಿಪ್ರಾಯ ಕೂಡ ಸಭೆಯಲ್ಲಿ ಪಡೆದಿದ್ದಾರೆ.
ಇಂದು ಮಧ್ಯಾಹ್ನದಿಂದ ಸಂಜೆವರೆಗೂ ತೋಟದ ಮನೆಯಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ ಅವರು ಮೈತ್ರಿ ಮಾಡಿಕೊಳ್ಳುವುದರಿಂದ ಆಗುವ ಅನುಕೂಲ, ಒಂದು ವೇಳೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಳ್ಳದಿದ್ದರೆ ಯಾವ ರೀತಿ ಸ್ಪರ್ಧೆ ಎದುರಿಸಬೇಕಾಗುತ್ತದೆ ಎಂಬ ವಿಚಾರದ ಬಗ್ಗೆಯೂ ಗಂಭೀರ ಚರ್ಚೆ ನಡೆಸಿದ್ದಾರೆ. ಇದರ ಜತೆಗೆ ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.
ಮೊದಲಿಗೆ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ ನಂತರ ರಾಮನಗರ ಕ್ಷೇತ್ರದ ಕಾರ್ಯಕರ್ತರ ಕುಂದು-ಕೊರತೆಗಳನ್ನು ಆಲಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಾಗಿರುವ ವಿವಿಧ ಅಭಿವೃದ್ಧಿ ಕಾರ್ಯಗಳು, ಜನರು ಎದುರಿಸುತ್ತಿರುವ ಸಮಸ್ಯೆಗಳು, ಪರಿಹಾರ ಕ್ರಮಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ