ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಹವಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಅ.4- ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರಗಳೆರಡೂ ಕಡೆಯೂ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.
ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಇದೇ ರೀತಿ ಮಳೆ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ, ವಾಯುಭಾರ ಕುಸಿತ ಹಾಗೂ ಚಂಡಮಾರುತವಾಗಿ ಪ್ರಬಲವಾಗುವ ಮುನ್ಸೂಚನೆಗಳಿವೆ. ಅಲ್ಲದೆ, ತಮಿಳುನಾಡಿನ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಹೀಗೆ ಎರಡೂ ಕಡೆ ವಾತಾವರಣದಲ್ಲಿ ಏಕಕಾಲಕ್ಕೆ ಆಗಿರುವ ಬದಲಾವಣೆಯಿಂದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ.
ಈಗಾಗಲೇ ತಮಿಳುನಾಡಿನ ಚೆನ್ನೈನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಈಗಾಗಲೇ ಕೆಲವೆಡೆ ತುಂತುರು ಮಳೆ ಆರಂಭವಾಗಿದೆ. ನಾಳೆ ಹಾಗೂ ಶನಿವಾರ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಹೇಳಿದರು.
ಇನ್ನೂ ಮೂರ್ನಾಲ್ಕು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಆಗಾಗ್ಗೆ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಬೀಳುವ ಸಾಧ್ಯತೆಗಳಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ