
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದ್ದು, ನಾಳೆಯಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಬೆಂಗಳೂರು ಭಾಗದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಸೇರಿ ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಗಾಳಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಆಳ ಸಮುದ್ರಕ್ಕೆ ತೆರಳಿರುವ ಮೀನುಗಾರರನ್ನು ಕೂಡಲೇ ಕರೆಸುವಂತೆ ಕೇಂದ್ರ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಅ.5ರಿಂದ ಎರಡು ದಿನಗಳ ಕಾಲ ಕರಾವಳಿ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಜೆ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.