ಅ.9ರಂದು ವಿ.ಪಿ.ದೀನ್‍ದಯಾಳ್ ನಾಯ್ಡು ಜನ್ಮ ಶತಮಾನೋತ್ಸವ

ಬೆಂಗಳೂರು, ಅ.6- ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವಿ.ಪಿ.ದೀನ್‍ದಯಾಳ್ ನಾಯ್ಡು ಅವರ ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಅ.9ರಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ಪಿ.ದೀನ್‍ದಯಾಳ್ ನಾಯಕ್ ಸ್ವಾತಂತ್ರ್ಯ ಹೋರಾಟದ ಮೂಲಕ ದೇಶಸೇವೆ ಸಲ್ಲಿಸಿದವರು ಎಂದು ಹೇಳಿದರು.
ನ್ಯಾಯವಾದಿಗಳಾಗಿ ವಿವಿಧ ಸ್ಥರಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಎರಡು ವರ್ಷಗಳಿಂದ ಆಚರಿಸುತ್ತ ಬಂದಿದ್ದೇವೆ ಎಂದು ಹೇಳಿದರು.

ಈ ವರ್ಷ ಪ್ರತಿ ಜಿಲ್ಲಾವಾರು ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರನ್ನು ಗುರುತಿಸಿ 120 ಮಂದಿಗೆ ಸನ್ಮಾನಿಸಲಾಗುತ್ತಿದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್‍ಗೆ ಸೇರಿರುವ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿರುವ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಮಕ್ಕಳಲ್ಲಿ ವ್ಯಕ್ತಿತ್ವ ವಿಕಾಸನ, ಸಮಾಜಮುಖಿ ಕಾರ್ಯ, ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪಿ.ಜಿ.ಆರ್.ಸಿಂಧ್ಯ ತಿಳಿಸಿದ್ದಾರೆ.

ಮಕ್ಕಳ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪಾಲ್ಗೊಳ್ಳುವರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ