ಬೆಂಗಳೂರು, ಅ.7-ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಭರ್ಜರಿ ಕಾರ್ಯತಂತ್ರ ರೂಪಿಸಿದ್ದು, ಮೂರು ಕ್ಷೇತ್ರಗಳಿಗೆ ಘಟಾನುಘಟಿ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗುತ್ತಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಪಾಲಿಗೆ ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರಗಳು ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರ ದಕ್ಕುವ ಸಾಧ್ಯತೆ ಇದೆ. ಈ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರತಿ ಕ್ಷೇತ್ರಕ್ಕೂ ಪ್ರಭಾವಿ ನಾಯಕರ ಜೊತೆಗೆ ತಲಾ ಮೂರು ಮಂದಿ ಸಚಿವರನ್ನು ಉಸ್ತುವಾರಿಗೆ ನೇಮಿಸಲಾಗುತ್ತಿದೆ.
ಜಮಖಂಡಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಮುಖ ಉಸ್ತುವಾರಿ ನಾಯಕರಾಗಲಿದ್ದಾರೆ.
ಅವರೊಂದಿಗೆ ಸಂಪುಟದಲ್ಲಿರುವ ಕಾಂಗ್ರೆಸ್ನ ಎಲ್ಲಾ ಸಚಿವರನ್ನು ಚುನಾವಣಾ ಕಾರ್ಯಕ್ಕಾಗಿ ಉಸ್ತುವಾರಿಗಳನ್ನಾಗಿ ನೇಮಿಸಲಾಗುತ್ತಿದೆ ಮತ್ತು ಕೆಪಿಸಿಸಿ ಪದಾಧಿಕಾರಿಗಳು, ಶಾಸಕರು ಈ ಕ್ಷೇತ್ರಗಳಲ್ಲಿ ಚುನಾವಣೆಗಾಗಿ ಕೆಲಸ ಮಾಡಬೇಕೆಂಬ ಸೂಚನೆ ರವಾನೆಯಾಗಿದೆ.
ವೇಣುಗೋಪಾಲ್ ಆಗಮನ:
ನಿನ್ನೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ರಾಜ್ಯ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಮುಖಂಡರ ಜೊತೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಹಾಗೆಯೇ ಪ್ರತಿ ಕ್ಷೇತ್ರಕ್ಕೂ ಉಸ್ತುವಾರಿ ನಾಯಕರನ್ನು ನೇಮಿಸಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ.