ಬೆಂಗಳೂರು,ಅ.7-ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ ರಾಮನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿರುವ ಅತೃಪ್ತ ನಾಯಕರನ್ನು ಸೆಳೆಯುವ ಮೂಲಕ ಬಿಜೆಪಿ, ಜೆಡಿಎಸ್ಗೆ ಪ್ರಬಲ ಸ್ಪರ್ಧೆ ನೀಡಲು ಮುಂದಾಗಿದೆ.
ಕಾಂಗ್ರೆಸ್ನ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಸೇರಿದಂತೆ ಕೆಲವು ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿರುವ ನಾಯಕರನ್ನು ಸೆಳೆದು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಕಾರ್ಯ ತಂತ್ರ ಹೆಣೆದಿದೆ.
ಈಗಾಗಲೇ ಚಂದ್ರಶೇಖರ್ ಜೊತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಿದ್ದು, ಪಕ್ಷಕ್ಕೆ ಬಂದರೆ ಸೂಕ್ತ ಸ್ಥಾನಮಾನ ನೀಡುವ ಭರವಸೆಯೂ ಸಿಕ್ಕಿದೆ.
ಅಲ್ಲದೆ ಖುದ್ದು ಸಿ.ಎಂ.ಲಿಂಗಪ್ಪ ಅವರನ್ನೇ ಬಿಜೆಪಿಗೆ ಕರೆತರುವ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಒಂದು ವೇಳೆ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾದರೆ ಕೊನೆ ಕ್ಷಣದಲ್ಲಿ ಅವರೇ ಅಭ್ಯರ್ಥಿಯಾದರೂ ಅಚ್ಚರಿ ಇಲ್ಲ ಎಂದು ತಿಳಿದುಬಂದಿದೆ.
ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸದೇ ಜೆಡಿಸ್ಗೆ ಬೆಂಬಲ ಸೂಚಿಸಿರುವುದು ಜಿಲ್ಲಾ ಮುಖಂಡರ ಅಸಮಾಧಾಕ್ಕೆ ಕಾರಣವಾಗಿದೆ, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸೇರಿದಂತೆ ಹಲವರು ಕಾಂಗ್ರೆಸ್ನ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ತನ್ನ ಆಧಿಪತ್ಯ ಮುಂದುವರಿಸಲು ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಬೇಕಾಗಿತ್ತು, ಆದರೆ ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆ, ಕ್ಷೇತ್ರದಲ್ಲಿ ಪಕ್ಷದ ನಾಯಕತ್ವದ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಬಿಜೆಪಿ ಮುಂದಾಗಿದೆ, ಮಾಜಿ ಶಾಸಕ ಸಿಎಂ ಲಿಂಗಪ್ಪ ಅವರು ಪುತ್ರ ಶೇಖರ್ ಲಿಂಗಪ್ಪ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಉಪಚುನಾವಣೆ ಕಾರಣದಿಂದಾಗಿ ಹಲವರು ತಮ್ಮ ಪಕ್ಷ ನಿಷ್ಠೆ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ರಾಮನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ಎಂ ರುದ್ರೇಶ್ ಉಪಚುನಾವಣೆಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.
ಆದರೆ ರಾಮನಗರದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಸ್ಥಳೀಯ ಕಾಂಗ್ರೆಸ್ ನಾಯಕರು ಒಪ್ಪುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಜೆಡಿಎಸ್ಗೆ ವಿರುದ್ಧವಾಗಿ ರಾಜಕಾರಣ ಮಾಡಿಕೊಂಡು ಬಂದು ಈಗ ಉಪಚುನಾವಣೆಯಲ್ಲಿ ಆ ಪಕ್ಷದ ಅಭ್ಯರ್ಥಿಯನ್ನು ಹೇಗೆ ಬೆಂಬಲಿಸಬೇಕೆಂಬ ಪ್ರಶ್ನೆಯನ್ನು ರಾಜ್ಯ ನಾಯಕರ ಮುಂದಿಟ್ಟಿದ್ದಾರೆ.
ಕಾಂಗ್ರೆಸ್ನಿಂದ ಅಭ್ಯರ್ಥಿ ಕಣಕ್ಕಿಳಿಸಿದರೆ ನಾವು ಎಲ್ಲ ರೀತಿಯ ಸಹಕಾರ ನೀಡಲಿದ್ದೇವೆ. ಯಾವುದೇ ಕಾರಣಕ್ಕೂ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಸ್ಥಳೀಯ ನಾಯಕರು ಪಟ್ಟು ಹಿಡಿದಿದ್ದಾರೆ.
ಈ ಸಂಬಂಧ ಈಗಾಗಲೇ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಜೆಡಿಎಸ್ ಬೆಂಬಲಿಸುವ ಬದಲು ಪಕ್ಷದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಒತ್ತಡ ಹಾಕಲಾಗಿದೆ.
ಆದರೆ ಇದ್ಯಾವುದಕ್ಕೂ ಮುಖಂಡರು ಸೊಪ್ಪು ಹಾಕದ ಕಾರಣ ಅನೇಕರು ಅಸಮಾಧಾನಗೊಂಡು ಪಕ್ಷದಿಂದಲೇ ದೂರ ಸರಿಯುವ ಬೆದರಿಕೆ ಹಾಕಿದ್ದಾರೆ.
ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಿಜೆಪಿ ಅಸಮಾಧಾನಗೊಂಡಿರುವ ನಾಯಕರನ್ನು ಸೆಳೆಯಲು ಕಾರ್ಯತಂತ್ರ ಹೆಣೆದಿದೆ.