ಬೆಂಗಳೂರು,ಅ.7-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿಢೀರನೆ ಎದುರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ ಕರೆದಿದೆ.
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಗೆ ಕೋರ್ ಕಮಿಟಿ ಸದಸ್ಯರು, ಸಂಸದರು ಹಾಗೂ ಕೆಲ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಶಿವಮೊಗ್ಗ, ಮಂಡ್ಯ, ಬಳ್ಳಾರಿಯ ಲೋಕಸಭೆ ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಮತದಾನ ನಡೆದು 6ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಅನಿರೀಕ್ಷಿತವಾಗಿ ಎದುರಾಗಿರುವ ಚುನಾವಣೆಯನ್ನು ಎದುರಿಸಲು ಸಜ್ಜಾಗಿರುವ ಬಿಜೆಪಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಅಭ್ಯರ್ಥಿಗಳಿಗೆ ಪ್ರಬಲ ಪೈಪೆÇೀಟಿ ನೀಡುವಂತಹ ಹುರಿಯಾಳುಗಳನ್ನೇ ಕಣಕ್ಕಿಳಿಸಲು ತೀರ್ಮಾನಿಸಿದೆ.
ನಾಳೆ ನಡೆಯಲಿರುವ ಸಭೆಯಲ್ಲಿ ಐದು ಕ್ಷೇತ್ರಗಳ ಉಪಚುನಾವಣೆಗೆ ಬಹುತೇಕ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಉಪಚುನಾವಣೆ ಯಾಗಿರುವುದರಿಂದ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ, ಅಸಮಾಧಾನ, ಭಿನ್ನಮತಕ್ಕೆ ಅವಕಾಶವಿಲ್ಲದೆ ಸರ್ವ ಸಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರಯತ್ನಿಸುತ್ತಿದೆ.
ಭಿನ್ನಮತದ ಲಾಭವನ್ನು ಎದುರಾಳಿ ಪಕ್ಷಗಳು ಪಡೆದುಕೊಂಡರೆ ಫಲಿತಾಂಶ ವ್ಯತಿರಿಕ್ತವಾಗಬಹುದೆಂಬ ಹಿನ್ನೆಲೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ಕಮಲ ಪಡೆ ಮುಂದಾಗಿದೆ.
ನಾಳಿನ ಸಭೆಯಲ್ಲಿ ಪಕ್ಷದ ನಾಯಕರಿಂದ ಅಭಿಪ್ರಾಯವನ್ನು ಸಂಗ್ರಹಿಸಿ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಟ್ಟು ಈ ವಾರದೊಳಗೆ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಂಭವವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿರುವುದರಿಂದ ಹೇಗಾದರೂ ಮಾಡಿ ಉಪಚುನಾವಣೆಯಲ್ಲಿ ಗೆದ್ದು ದೋಸ್ತಿ ಪಕ್ಷಗಳಿಗೆ ಬಿಸಿ ಮುಟ್ಟಿಸುವುದು ಬಿಜೆಪಿಯ ಲೆಕ್ಕಾಚಾರವಾಗಿದೆ. ಹೀಗಾಗಿ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.
ಯಾರ್ಯಾರು ಅಭ್ಯರ್ಥಿಗಳು:
ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಮಾಜಿ ಶಾಸಕ ಬಿ.ವೈ.ರಾಘವೇಂದ್ರ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದರಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಹುತೇಕ ಬಗೆಹರಿದಂತಾಗಿದೆ.
ಸಕ್ಕರೆ ನಾಡು ಮಂಡ್ಯದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಪಕ್ಷ ಇನ್ನು ಗೊಂದಲದಲ್ಲೇ ಇದೆ. ಮೊದಲೇ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಹೇಳಿಕೊಳ್ಳುವಂತಿಲ್ಲ. ಅಲ್ಲದೆ ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ಕಾಂಗ್ರೆಸ್ ಬೆಂಬಲ ನೀಡುವುದರಿಂದ ಬಿಜೆಪಿಯಿಂದ ಕಣಕ್ಕಿಳಿಯಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ.
ಗಣಿನಾಡು ಬಳ್ಳಾರಿ ಜಿಲ್ಲೆಯ ಲೋಕಸಭಾ ಕ್ಷೇತ್ರದ ಉಪಸಮರಕ್ಕೆ ಬಿಜೆಪಿಯಿಂದ ಹಲವು ಹೆಸರುಗಳು ಕೇಳಿಬಂದಿವೆ. ಮಾಜಿ ಸಂಸದೆ, ಶಾಸಕ ಶ್ರೀರಾಮಲು ಅವರ ಸಹೋದರಿ ಜೆ.ಶಾಂತ, ಅಳಿಯ ಮಾಜಿ ಶಾಸಕ ಸುರೇಶ್ಬಾಬು, ಸಣ್ಣಪಕ್ಕೀರಪ್ಪ, ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಹೆಸರುಗಳು ಚಾಲ್ತಿಯಲ್ಲಿವೆ.
ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಪುತ್ರ ಚಂದ್ರಶೇಖರ್ , ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ರೇಸ್ನಲ್ಲಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೂ ಬಿಜೆಪಿಯಿಂದ ಮೂವರ ಹೆಸರುಗಳು ಕೇಳಿಬಂದಿದೆ. ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ, ಶಾಸಕ ಮುರುಗೇಶ್ ನಿರಾಣಿ ಸಹೋದರ ಹನುಮೇಶ್ ನಿರಾಣಿ ಹಾಗೂ ಮುಖಂಡ ಜಗದೀಶ್ ಕುರ್ಲಾಗುಂಟ ಹೆಸರುಗಳು ಕೇಳಿಬಂದಿವೆ.
ಅಂತಿಮವಾಗಿ ನಾಳೆ ನಡೆಯಲಿರುವ ಸಭೆಯಲ್ಲಿ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.