ಬೆಂಗಳೂರು,ಅ.7- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿರುವುದರಿಂದ ಶಿಕ್ಷಕರ ವರ್ಗಾವಣೆ ಕುರಿತಂತೆ ಸ್ಪಷ್ಟನೆ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಕರನ್ನು ವರ್ಗಾವಣೆ ಮಾಡಬೇಕೆ, ಬೇಡವೇ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ಗೆ ಪತ್ರ ಬರೆದಿದ್ದಾರೆ.
ಈಗಾಗಲೇ ಶಿಕ್ಷಕರ ವರ್ಗಾವಣೆ ಸಂಬಂಧ ಸೋಮವಾರದಿಂದ ಕೌನ್ಸಿಲಿಂಗ್ ಆರಂಭವಾಗಲಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರ್ಗಾವಣೆ ಕುರಿತು ಆಯೋಗ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ನಿನ್ನೆಯಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಸಂಜೀವ್ಕುಮಾರ್ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭೆ ಹಾಗೂ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಯಾವುದೇ ರೀತಿಯ ವರ್ಗಾವಣೆ ಮಾಡಬಾರದೆಂದು ಸೂಚಿಸಿದ್ದರು.
ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕೌನ್ಸಿಲಿಂಗ್ ಆರಂಭಿಸಲು ಎಲ್ಲ ಸಿದ್ದತೆಗಳನ್ನು ಪೂರ್ಣಗೊಳಿಸಿದ್ದು, ನಾಳೆಯಿಂದ ಪ್ರಾರಂಭವಾಗಬೇಕಿತ್ತು. ಈಗ ಆಯೋಗ ವರ್ಗಾವಣೆ ಮಾಡುವಂತಿಲ್ಲ ಎಂದು ಸೂಚಿಸಿರುವುದರಿಂದ ಸ್ಪಷ್ಟನೆ ಕೇಳಲು ಮುಂದಾಗಿದೆ.
ಒಂದು ವೇಳೆ ಆಯೋಗದಿಂದ ಯಾವುದೇ ರೀತಿಯ ಸ್ಪಷ್ಟನೆ ಬಾರದಿದ್ದರೆ ಶಿಕ್ಷಕರ ವರ್ಗಾವಣೆ ಮತ್ತೆ ನೆನೆಗುದಿಗೆ ಬೀಳಲಿದೆ.