ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲೂ ತೀವ್ರ ಕಸರತ್ತು

ಬೆಂಗಳೂರು, ಅ.8- ಐದು ಕ್ಷೇತ್ರಗಳ ಉಪಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳುತ್ತಿದ್ದು, ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲೂ ತೀವ್ರ ಕಸರತ್ತು ನಡೆಯುತ್ತಿದೆ.

ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿಯವರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.

ಈ ನಡುವೆ ಬಿಜೆಪಿ ಇಂದಿನಿಂದಲೇ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆ ಆರಂಭಿಸಿದೆ. ಕಾಂಗ್ರೆಸ್ ನಾಳೆ ಸಭೆ ನಡೆಸಲಿದೆ. ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ರಾಮನಗರದಲ್ಲಿ ಕಾರ್ಯಕರ್ತರೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್‍ನ ಅಭ್ಯರ್ಥಿಗಳಿಗಿಂತಲೂ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ರಾಜ್ಯದ ಜನರಲ್ಲಿ ತೀವ್ರ ಕುತೂಹಲ ಮೂಡಿದೆ. ಈಗಾಗಲೇ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ.
ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‍ನ ಭದ್ರಕೋಟೆಯಾಗಿದ್ದು, ಇದನ್ನು ಉಳಿಸಿಕೊಳ್ಳಲು ಪಕ್ಷದ ನಾಯಕರು ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ನಿವೃತ್ತ ಅಧಿಕಾರಿ ಅಶ್ವಿನ್‍ಗೌಡ, ಲಕ್ಷ್ಮೀ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಹೆಸರುಗಳು ಪ್ರಸ್ತಾಪವಾಗುತ್ತಿವೆ.
ಎಲ್.ಆರ್.ಶಿವರಾಮೇಗೌಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ, ಜೆಡಿಎಸ್ ವರಿಷ್ಠರು ಇನ್ನೂ ಕೂಡ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರು ಸ್ಪರ್ಧೆ ಮಾಡಲು ಉತ್ಸುಕರಾಗಿದ್ದರು. ಆದರೆ, ದೇವೇಗೌಡರು ಪ್ರಜ್ವಲ್ ಅವರನ್ನು ಮನವೊಲಿಸಿದ್ದರು. ಬೇಲೂರು, ಹುಣಸೂರು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಪ್ರಜ್ವಲ್ ಹೆಸರು ಪ್ರಸ್ತಾಪವಾಗಿತ್ತು. ಆ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಮ್ಮ ಕುಟುಂಬದಿಂದ ಎಚ್.ಡಿ.ರೇವಣ್ಣ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಾತ್ರ ಸ್ಪರ್ಧೆಗೆ ಅವಕಾಶ ನೀಡಿದ್ದರು.

ಈಗ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ಮತ್ತೆ ಪ್ರಜ್ವಲ್ ರೇವಣ್ಣ ಅವರ ಹೆಸರು ಪ್ರಬಲವಾಗಿ ಪ್ರಸ್ತಾಪವಾಗುತ್ತಿದೆ.
ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮಂಡ್ಯ ಲೋಕಸಭೆ ಕ್ಷೇತ್ರದ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಇನ್ನೂ ಯಾವುದೇ ನಿರ್ಧಾರವನ್ನು ವರಿಷ್ಠರು ಕೈಗೊಂಡಿಲ್ಲ.
ಸ್ಪರ್ಧಾಕಾಂಕ್ಷಿಗಳು ಈಗಾಗಲೇ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್ ಕೋರುವ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಯಾರಿಗೂ ಕೂಡ ಇನ್ನೂ ಟಿಕೆಟ್ ನೀಡುವ ಖಾತ್ರಿಯನ್ನು ವರಿಷ್ಠರು ನೀಡಿಲ್ಲ.

ಕಳೆದ ವಿಧಾನಸಭೆ ಚುನಾವಣೆ ವೇಳೆ ನಾಗಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟನ್ನು ಸುರೇಶ್‍ಗೌಡ ಅವರಿಗೆ ನೀಡಲಾಗಿತ್ತು. ಎಲ್.ಆರ್.ಶಿವರಾಮೇಗೌಡ ಅವರಿಗೆ ಬೆಂಗಳೂರು ಪದವೀಧರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತಾದರೂ ಕೊನೆಗಳಿಗೆಯಲ್ಲಿ ಅಭ್ಯರ್ಥಿಗಳನ್ನು ಬದಲಿಸಲಾಗಿತ್ತು. ಹೀಗಾಗಿ ಶಿವರಾಮೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಲು ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದು, ಕೊನೆಗಳಿಗೆಯಲ್ಲಿ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ