ಬೆಂಗಳೂರು,ಅ.12- ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ಇಂದು ನಡೆದ ಪ್ರಗತೀ ಪರಿಶೀಲನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಗಳ ಪ್ರಯಾಣ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ. ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆಗೆ ಸಂಸ್ಥೆ ಮುಂದಾಗಿತ್ತು.
ಕಳೆದ ತಿಂಗಳಿನಲ್ಲಿ ಶೇ.18ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಸಿದ್ದತೆ ಮಾಡಲಾಗಿತ್ತು. ಆಗ ಮುಖ್ಯಮಂತ್ರಿ ಕುಮಾರಸ್ವಾಮಿ ದರ ಏರಿಸದಂತೆ ತಡೆವೊಡ್ಡಿದ್ದರು.
ಇಂದು ನಡೆದ ಸಭೆಯಲ್ಲೂ ಸಹ ಜನಸಾಮಾನ್ಯರಿಗೆ ಬಸ್ ಪ್ರಯಾಣ ದರ ಏರಿಕೆಯಿಂದ ಆಗುವ ಹೊರೆಯನ್ನು ತಪ್ಪಿಸುವಂತೆ ಸೂಚಿಸಿದ್ದಾರೆ.