
ಬೆಂಗಳೂರು, ಅ.14- ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ನಾಳೆ ಮಧ್ಯಾಹ್ನ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಸ್ಥಳೀಯ ನಾಯಕರು ಸಾಥ್ ನೀಡಲಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ಅಧಿಕೃತವಾಗಿ ಅನಿತಾಕುಮಾರಸ್ವಾಮಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಿತಾಕುಮಾರಸ್ವಾಮಿ ಮಧುಗಿರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾಗಿದ್ದರು.
2013ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡಿದ್ದರು. ನಂತರ ಚುನಾವಣೆಯಿಂದ ದೂರ ಉಳಿದಿದ್ದ ಅನಿತಾಕುಮಾರಸ್ವಾಮಿ ಈಗ ರಾಮನಗರದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ರಾಮನಗರದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಸಾಧ್ಯತೆಗಳಿವೆ.